ಶಿವಮೊಗ್ಗ: ‘ ಗ್ರಾಮೀಣ ಭಾಗದಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.
ಕಳಪೆ ಗುಣಮಟ್ಟದ ಕಾಮಗಾರಿ ಕಂಡುಬಂದರೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು. ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.
ಜಲಜೀವನ ಮಿಷನ್ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲಿ 14ನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 3 ಲಕ್ಷ ಮನೆಗಳಿಗೆ ಯೋಜನೆಯಡಿ ನಲ್ಲಿ ನೀರು ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ 86,898 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗುತ್ತಿದೆ. ಇದುವರೆಗೆ 75 ಸಾವಿರ ಸಂಪರ್ಕಗಳನ್ನು ಪೂರ್ಣಗೊಳಿಸಿ, ನೀರು ಪೂರೈಕೆ ಮಾಡಲಾಗುತ್ತಿದೆ. ಉಳಿದ ಕಾಮಗಾರಿ ಮಾರ್ಚ್ ಅಂತ್ಯದ ಒಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಮಾತನಾಡಿ, ‘ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ರೈತರ ಸಂಖ್ಯೆ ಕಡಿಮೆಯಿದ್ದು, ಎಲ್ಲಾ ರೈತರು ಇದರ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ಜಿಲ್ಲೆಯ ಸಹಕಾರ ಬ್ಯಾಂಕ್‍ನಲ್ಲಿ 96 ಸಾವಿರಕ್ಕೂ ಅಧಿಕ ರೈತರು ಖಾತೆಯನ್ನು ಹೊಂದಿದ್ದಾರೆ. ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿರುವ ರೈತರ ಸಂಖ್ಯೆ 19 ಸಾವಿರ ಮಾತ್ರ ಇದೆ. ಬೆಳೆ ಹಾನಿ ಸಂಭವಿಸಿದ ಸಮಯದಲ್ಲಿ ವಿಮಾ ಹಣವನ್ನು ನೀಡುವ ಈ ಮಹತ್ವದ ಯೋಜನೆ ಬಗ್ಗೆ ರೈತರಿಗೆ ಮಾಹಿತಿಯನ್ನು ಒದಗಿಸಬೇಕು. ಯೋಜನೆಯ ಲಾಭ ಹೆಚ್ಚಿನ ರೈತರು ಪಡೆಯುವಂತೆ ಮನವೊಲಿಸಬೇಕು’ ಎಂದು ತಾಕೀತು ಮಾಡಿದರು.
‘