ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಮ್ಮುಖದಲ್ಲಿ ಖಾನಾಪುರ ಮಾಜಿ ಶಾಸಕ ಅರವಿಂದ ಪಾಟೀಲ್ ಅಧಿಕೃತವಾಗಿ ತಮ್ಮ ಹಲವಾರು ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸಾಯಂಕಾಲ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ ಖಾನಾಪುರ ಮಾಜಿ ಎಂಇಎಸ್ ಶಾಸಕ ಅರವಿಂದ ಪಾಟೀಲ್ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಬಿಜೆಪಿ ಶಾಲು ಹಾಕಿ ಅರವಿಂದ ಪಾಟೀಲ್ ಮತ್ತು ಅವರ ಬೆಂಬಲಿಗರನ್ನು ನಳೀನಕುಮಾರ್ ಕಟೀಲ್ ಮತ್ತು ಲಕ್ಷ್ಮಣ ಸವದಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ, ಶಾಸಕ ಮಹಾಂತೇಶ ದೊಡ್ಡಗೌಡರ, ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್, ಮಾಜಿ ಎಂಎಲ್‍ಸಿ ಮಹಾಂತೇಶ ಕವಟಗಿಮಠ, ಮಾರುತಿ ಅಷ್ಟಗಿ ಸೇರಿದಂತೆ ಜಿಲ್ಲೆಯ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.