ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಬೇಡ್ಕರ್ ಜಯಂತಿಯಂದು ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಅವಕಾಶ ನೀಡುವುದಿಲ್ಲ. ಒಂದೊಮ್ಮೆ ಮಾಲಾರ್ಪಣೆ ಮಾಡಿದರೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುತ್ತೇವೆ’ ಎಂದು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ- ಕರ್ನಾಟಕ ಎಚ್ಚರಿಸಿದೆ.
‘ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಫೆಬ್ರುವರಿ 19ರಂದು ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಆಗ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಮುಖ್ಯಮಂತ್ರಿಯವರು ತಪ್ಪಿತಸ್ಥರ ವಿರುದ್ಧ ಮೂರೇ ದಿನಗಳಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಭೆ ನಡೆಸುವುದಾಗಿಯೂ ಹೇಳಿದ್ದರು. ಕೊಟ್ಟ ಮಾತು ಮರೆತಿರುವ ಅವರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ನೈತಿಕತೆಯನ್ನೇ ಕಳೆದುಕೊಂಡಿದ್ದಾರೆ’ ಎಂದು ಒಕ್ಕೂಟದ ಸದಸ್ಯರು ದೂರಿದರು.
‘ಮುಖ್ಯಮಂತ್ರಿಯವರು ಆರ್‌ಎಸ್‌ಎಸ್ ಏಜೆಂಟ್‌ನಂತೆ ವರ್ತಿಸುತ್ತಿದ್ದಾರೆ. ಅವರಿಗೆ ಕಾನೂನಿನ ಮೇಲೆ ಗೌರವವೇ ಇಲ್ಲ. ಸಮುದಾಯದ ಹೆಸರು ಹೇಳಿಕೊಂಡು ಆಯ್ಕೆಯಾಗಿರುವ ಶಾಸಕರೂ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಮುಂದಿನ ದಿನಗಳಲ್ಲಿ ಅವರಿಗೆ ‘ಶ್ರದ್ಧಾಂಜಲಿ’ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ’ ಎಂದೂ ತಿಳಿಸಿದರು.