ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ. ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್ ರಾದ್ಧಾಂತಕ್ಕೆ ಕಾರಣ ಎಂದು ಘಟನೆಯನ್ನು ಖಂಡಿಸಿದ್ದಾರೆ.
ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ ಮೇಲೆ ದಾಳಿ, ಠಾಣೆ ಮತ್ತು ಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಕಿಡಿಗೇಡಿ ಯುವಕನ ಬಂಧನವಾಗಿದೆ. ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ. ಅನುಭವದಿಂದ ಪಾಠ ಕಲಿಯುತ್ತಿಲ್ಲ ಎನ್ನುವುದಕ್ಕೆ ಹುಬ್ಬಳ್ಳಿ ಘಟನೆ ಒಂದು ನಿದರ್ಶನ. ಹಿಂದೆ ಬೆಂಗಳೂರಿನಲ್ಲಿ ಕಿಡಿಗೇಡಿ ಯುವಕನೊಬ್ಬ ಒಂದು ಧರ್ಮಗುರುವಿನ ಬಗ್ಗೆ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಪರಿಣಾಮ, ಶಾಸಕರೊಬ್ಬರ ಮನೆ, ಡಿಜೆ ಹಳ್ಳಿ ಪೊಲೀಸ್ ಠಾಣೆಯೇ ಬೆಂಕಿಗೆ ಆಹುತಿಯಾಗಿತ್ತು ಎಂದು ಬೆಂಗಳೂರಿನಲ್ಲಿ ನಡೆದಿದ್ದ ಗಲಭೆಯನ್ನು ಉಲ್ಲೇಖಿಸಿ ಬೇಸರ ವ್ಯಕ್ತಪಡಿಸಿದ್ದಾರೆ.