Breaking News

ಸಂತೋಷ್ ಆತ್ಮಹತ್ಯೆ ಬೆನ್ನಲ್ಲೆ ಗುತ್ತಿಗೆದಾರರ ಬಿಲ್ ಪಾವತಿ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

Spread the love

ಬೆಂಗಳೂರು, ಏ.22. ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಮೀಷನ್ ಗಲಾಟೆ ನಡೆಯುತ್ತಿರುವುದರ ಮಧ್ಯೆಯೇ ಹೈಕೋರ್ಟ್ ಗುತ್ತಿಗೆದಾರರಿಗೆ ನೆರವಿಗೆ ಧಾವಿಸಿದೆ.

ನ್ಯಾಯಾಲಯ ಮಹತ್ವದ ಪ್ರಕರಣವೊಂದರಲ್ಲಿ, ಯಾವುದೇ ಲೋಪವಿಲ್ಲದೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರಿಗೆ ಸಕಾಲದಲ್ಲಿ ಹಣ ಪಾವತಿ ಮಾಡಬೇಕು ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ಖಡಕ್ ಆದೇಶ ನೀಡಿದೆ.

 

“ಯಾವುದೇ ಲೋಪವಿಲ್ಲದೆ ಕಾಮಗಾರಿ ಪೂರ್ಣಗೊಳಿಸಿದ್ದರೂ ಗುತ್ತಿಗೆ ಹಣ ಪಾತಿಸುತ್ತಿಲ್ಲವೆಂದು ಆಕ್ಷೇಪಿಸಿ ಗುತ್ತಿಗೆದಾರರು ಕೋರ್ಟ್ ಮೆಟ್ಟಿಲೇರುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಇಂತಹ ಪ್ರಕರಣಗಳಲ್ಲಿ ಸರ್ಕಾರ ಮತ್ತು ಸರ್ಕಾರಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸಂವಿಧಾನದ ಹೊಣೆಗಾರಿಕೆ ನಿರ್ವಹಣೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಬೇಕು. ಗುತ್ತಿಗೆ ಹಣ ಪಾವತಿಸದೆ ಅಪ್ರಮಾಣಿಕತೆ ಮೆರೆಯಬಾರದು. ಗುತ್ತಿಗೆದಾರರಿಗೆ ಸಕಾಲದಲ್ಲಿ ಹಣ ಪಾವತಿಸಬೇಕು,” ಎಂದು ನಿರ್ದೇಶನ ನೀಡಿದೆ.

ಬ್ಯಾಟರಾಯನಪುರ ಮತ್ತು ಯಲಹಂಕ ವಿಭಾಗದಲ್ಲಿ ಬಿಬಿಎಂಪಿಯ ಗುತ್ತಿಗೆ ಕಾಮಗಾರಿ ಪೂರ್ಣಗೊಳಿಸಿ ಹಲವು ತಿಂಗಳ ಕಳೆದಿದ್ದರೂ ಹಣ ಬಿಡುಗಡೆ ಮಾಡಿಲ್ಲವೆಂದು ಆರೋಪಿಸಿ ನಗರದ ಸತ್ಯ ಕನ್ಸ್‌ಟ್ರಕ್ಷನ್ಸ್ ಕಂಪನಿ ಮತ್ತು ಗುತ್ತಿಗೆದಾರರಾದ ಬಿ.ಬಿ. ಉಮೇಶ್ ಮತ್ತು ರೋಹಿತ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ನ್ಯಾಯಸಮ್ಮತವಲ್ಲ:

ಅಲ್ಲದೆ, ಗುತ್ತಿಗೆದಾರರು ಭಾರಿ ಪ್ರಮಾಣದ ಹಣ ಖರ್ಚು ಮಾಡಿ ಕಾಮಗಾರಿ ಮುಗಿಸಿರುತ್ತಾರೆ. ಕೆಲ ಸಂದರ್ಭದಲ್ಲಿ ಸಾಲ ಮಾಡಿಯೂ ಹಣ ವಿನಿಯೋಗ ಮಾಡಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿದ್ದರೂ ಹಾಗೂ ಅದನ್ನು ದೃಢೀಕರಿಸಿ ಪ್ರಮಾಣ ಪತ್ರ ನೀಡಿದ್ದ ನಂತರವೂ ಹಣ ಬಿಡುಗಡೆಗೆ ವಿಳಂಬ ಮಾಡುವುದು ನ್ಯಾಯಸಮ್ಮತವಲ್ಲ, ಹಣಕ್ಕಾಗಿ ಗುತ್ತಿಗೆದಾರರು ಕೋರ್ಟ್ ಮೆಟ್ಟಿಲೇರಿ ಕಾನೂನು ಹೋರಾಟ ನಡೆಸುವ ಪರಿಸ್ಥಿತಿ ಸೃಷ್ಟಿಸಬಾರದು ಎಂದು ಕೋರ್ಟ್ ಹೇಳಿದೆ.

ಪ್ರಕರಣ ಸಂಬಂಧ ಹೈಕೋರ್ಟ್ ಕಳೆದ ವಾರ ತೀವ್ರ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತ ಬಿಬಿಎಂಪಿ, ಅರ್ಜಿದಾರರು ಕೈಗೊಂಡಿರುವ ಕಾಮಗಾರಿಗಳಿಗೆ ಸರ್ಕಾರದ ಅನುದಾನ ಬಿಡುಗಡೆ ಮಾಡಬೇಕಿದೆ. ಅದಕ್ಕಾಗಿ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕಿದೆ. ನಾಲ್ಕು ವಾರ ಕಾಲಾವಕಾಶ ನೀಡಿದರೆ, ಹಣ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿ ಮೆಮೋ ಸಲ್ಲಿಸಿದೆ.

ನ್ಯಾಯಾಂಗ ನಿಂದನೆ ಎಚ್ಚರಿಕೆ:

ಅದನ್ನು ಪರಿಗಣಿಸಿದ ಹೈಕೋರ್ಟ್, ನ್ಯಾಯಾಲಯಕ್ಕೆ ನೀಡಿರುವ ಭರವಸೆಯಂತೆ ಅರ್ಜಿದಾರರಿಗೆ ಶೀಘ್ರ ಹಣ ಬಿಡುಗಡೆ ಮಾಡಬೇಕು. ವಿಳಂಬವಾದರೆ ಮಾಡಿದರೆ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬೇಕಿದ್ದ ದಿನದಿಂದ ಪ್ರತಿ ತಿಂಗಳಿಗೆ ಶೇ.2ರಷ್ಟು ಬಡ್ಡಿ ಪಾವತಿಸಬೇಕು. ಆ ಹಣವನ್ನು ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಈ ಆದೇಶ ಪಾಲಿಸಿದ ಬಗ್ಗೆ ಎರಡು ವಾರದಲ್ಲಿ ರಿಜಿಸ್ಟ್ರಾರ್ ಜನರಲ್‌ಗೆ ವರದಿ ಸಲ್ಲಿಸಬೇಕು ಎಂದು ಬಿಬಿಎಂಪಿಗೆ ನಿರ್ದೇಶಿಸಿದ್ದು, ತಪ್ಪಿದರೆ ನ್ಯಾಯಾಂಗ ನಿಂದನೆಯಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ