Breaking News

ಮೀಸಲಾತಿಗೆ ಪ್ರಬಲರ ಹಟ: ಒಕ್ಕಲಿಗರು , ಪಂಚಮಸಾಲಿ ಸಮುದಾಯದವರ ಹೋರಾಟ

Spread the love

 

ಬೆಂಗಳೂರು: ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ 4ರಿಂದ ಶೇ 12ಕ್ಕೆ ಹೆಚ್ಚಿಸಲು ಆಗ್ರಹಿಸಿ ದೊಡ್ಡ ಮಟ್ಟದ ಹೋರಾಟಕ್ಕೆ ಒಕ್ಕಲಿಗರ ಸಂಘ ಮತ್ತು ಮೀಸಲಾತಿ ಹೋರಾಟ ಸಮಿತಿ ಸಜ್ಜಾಗಿದೆ. ಸಮುದಾಯದ ಸ್ವಾಮೀಜಿಗಳು, ರಾಜಕಾರಣಿಗಳು ಮತ್ತು ಮುಖಂಡರು ಸೇರಿ ಪ್ರಮುಖರ ಸಭೆ ನ.27ರಂದು ನಡೆಯಲಿದ್ದು, ಹೋರಾಟ ರೂಪುರೇಷೆ ಸಿದ್ಧವಾಗಲಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ, ‘ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಭೆಯಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಕುಮಾರ ಚಂದ್ರಶೇಖರಸ್ವಾಮೀಜಿ ಅವರು ಸಾನಿಧ್ಯ ವಹಿಸಲಿದ್ದಾರೆ. ಆದಿಚುಂಚನಗಿರಿ ಶ್ರೀಗಳ ಸಲಹೆ ಮತ್ತು ಸೂಚನೆ ಮೇರೆಗೆ ಸಭೆ ಕರೆಯಲಾಗಿದೆ’ ಎಂದು ಹೇಳಿದರು.

ರಾಜ್ಯಸಭೆ ಸದಸ್ಯ ಎಚ್.ಡಿ.ದೇವೇಗೌಡ, ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ, ಸಂಸದ ಡಿ.ವಿ.ಸದಾನಂದಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಚಿವರಾದ ಆರ್.ಅಶೋಕ, ಸಿ.ಎನ್‌.ಅಶ್ವತ್ಥನಾರಾಯಣ, ಆರಗ ಜ್ಞಾನೇಂದ್ರ, ಎಸ್.ಟಿ.ಸೋಮಶೇಖರ್, ಕೆ.ಸುಧಾಕರ್, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ ಅವರನ್ನು ಸಭೆಗೆ ಆಹ್ವಾನಿಸಲಾಗಿದೆ. ಸಮುದಾಯದ ಹಾಲಿ ಮತ್ತು ಮಾಜಿ ಶಾಸಕರು, ಸಾಹಿತಿಗಳು, ಹೋರಾಟಗಾರರು, ಚಿತ್ರರಂಗ ಪ್ರಮುಖರು, ಸಂಘ-ಸಂಸ್ಥೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿದ ಸರ್ಕಾರ ನಿರ್ಧಾರ ಸ್ವಾಗತಾರ್ಹ. ಅದೇ ರೀತಿ ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕಿದೆ. ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಪ್ರವರ್ಗ 3ಎ ಮೀಸಲಾತಿಯನ್ನು ನಮ್ಮ ಸಮುದಾಯ ಪಡೆದುಕೊಳ್ಳುತ್ತಿದ್ದು, ಶೇ 16ಕ್ಕೂ ಹೆಚ್ಚಿರುವ ಸಮುದಾಯ ಶೇ 4ರಷ್ಟು ಮಾತ್ರ ಮೀಸಲಾತಿ ಪಡೆದುಕೊಳ್ಳುತ್ತಿದೆ’ ಎಂದರು.

‘ಆದ್ದರಿಂದ ಮೀಸಲಾತಿ ಹೆಚ್ಚಿಸುವ ಅನಿವಾರ್ಯ ಇದೆ. ಈ ಸಂಬಂಧ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಮಹತ್ವದ ನಿರ್ಣಯಗಳನ್ನು ಭಾನುವಾರದ ಸಭೆ ಕೈಗೊಳ್ಳಲಿದೆ’ ಎಂದು ಬಾಲಕೃಷ್ಣ ಹೇಳಿದರು.

ಡಿ.19: ಪಂಚಮಸಾಲಿ ಸಮುದಾಯದ ಗಡುವು

ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಬಗ್ಗೆ ಬೆಳಗಾವಿಯಲ್ಲಿ ಡಿ.19ರಿಂದ ನಡೆಯಲಿರುವ ವಿಧಾನಮಂಡಲ ಅಧಿವೇಶನಕ್ಕೆ ಮುನ್ನ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸರ್ಕಾರ ವರದಿ ಪಡೆಯಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ‍ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ