ಹಾವೇರಿ : ರಾಜ್ಯದ ಶಾಲಾ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಎನ್ ಡಬ್ಲ್ಯೂ ಕೆಎಸ್ ಆರ್ ಟಿಸಿ ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುವುದು. ಖಾಸಗಿಯವರ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ವಿಶೇಷ ಸಾರಿಗೆ ಸೌಲಭ್ಯ ಯೋಜನೆಯಡಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶಾಲಾರಂಭ ಹಾಗೂ ಮುಕ್ತಾಯದ ವೇಳೆ ಸಮಯಕ್ಕೆ ಸರಿಯಾಗಿ ನಿಗದಿತ ಮಾರ್ಗದಲ್ಲಿ ಬಸ್ ಓಡಿಸಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಮಯಕ್ಕೆ ಸರಿಯಾಗಿ ಶಾಲೆಗೆ ತಲುಪಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.