ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಫೆ.27ರಂದು ನಗರದ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ರೈಲ್ವೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಫಲಾನುಭವಿಗಳು ಸೇರಿದಂತೆ ಸುಮಾರು ಒಂದು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಗಣ್ಯರ ಭದ್ರತೆ, ವೇದಿಕೆ ನಿರ್ಮಾಣ, ಸಂಚಾರ ನಿರ್ವಹಣೆ, ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನೆರವೇರಿಸಬೇಕು’ ಎಂದರು.
‘ಸಮಯ ಕಡಿಮೆ ಇರುವುದರಿಂದ ಎಲ್ಲ ಇಲಾಖೆಯ ಅಧಿಕಾರಿಗಳು ತಮಗೆ ಒಪ್ಪಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು. ಕಾರ್ಯಕ್ರಮದ ರೂಪುರೇಷೆ ಅಂತಿಮಗೊಂಡ ಬಳಿಕ ಮತ್ತಷ್ಟು ವಿಸ್ತೃತವಾಗಿ ಚರ್ಚಿಸಿ ಸೂಕ್ತ ನಿರ್ದೇಶನಗಳನ್ನು ನೀಡಲಾಗುವುದು’ ಎಂದು ಹೇಳಿದರು.
ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್, ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿ ಹರಿತಾ, ಡಿಸಿಪಿ ಶೇಖರ್ ಎಸ್.ಟಿ., ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಡಿಸಿಪಿ ಸ್ನೇಹಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು