ಬೆಂಗಳೂರು: ಬಿಜೆಪಿಯ ಹಾಲಿ ಎಂಎಲ್ ಸಿ ಪುಟ್ಟಣ್ಣ ಅವರು ಇಂದು ತಮ್ಮ ಎಂ ಎಲ್ ಸಿ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸೇರಲು ಇಚ್ಛಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಪುಟ್ಟಣ್ಣ ಅವರ ಕೊಡುಗೆ ಅಪಾರವಾಗಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಸತತ ನಾಲ್ಕು ಬಾರಿ ಗೆಲವು ಸಾಧಿಸಿದ್ದಾರೆ. ಇನ್ನು ಕೆಲವು ವರ್ಷಗಳ ಕಾಲ ಅಧಿಕಾರವಿದ್ದರೂ ಬಿಜೆಪಿ ಆಡಳಿತಕ್ಕೆ ಬೇಸತ್ತು, ತಮ್ಮ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗದೇ ಈ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಅವರ ಈ ತೀರ್ಮಾನಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪುಟ್ಟಣ್ಣ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಪುಟ್ಟಣ್ಣ ಅವರು ಯಾವುದೇ ಟಿಕೆಟ್, ಅಧಿಕಾರದ ಆಕಾಂಕ್ಷೆ ಇಲ್ಲದೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದಾರೆ. ಅವರು ಇನ್ನು ಪಕ್ಷದ ಸದಸ್ಯತ್ವ ಸ್ಥಾನ ಪಡೆದಿಲ್ಲ. ಹೀಗಾಗಿ ಟಿಕೆಟ್ ನೀಡುವ ವಿಚಾರ ಈಗ ಪ್ರಸ್ತುತವಲ್ಲ ಎಂದರು.
ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ಪಕ್ಷ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿದ್ದು, ಈ ಸಭೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿನ ಟಿಕೆಟ್ ಆಕಾಂಕ್ಷಿಗಳ ಅರ್ಜಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುವುದು. ನಾವು ಸ್ಥಳೀಯ ನಾಯಕರ ಜತೆ ಮಾತನಾಡಿ ಅವರ ಅಭಿಪ್ರಾಯ ಪಡೆದು ಎಲ್ಲ ಸಮಾಜದವರಿಗೆ ನ್ಯಾಯ ಒದಗಿಸಲು ಅನೇಕ ಶಿಫಾರಸ್ಸು ಮಾಡಿದ್ದೇವೆ. ಕೇಂದ್ರ ಚುನಾವಣಾ ಸಮಿತಿ ದಿನಾಂಕ ನಿಗದಿ ಮಾಡಿದ ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು.