ಬೆಂಗಳೂರು: ಪಕ್ಷದ ಸ್ಕ್ರೀನಿಂಗ್ ಕಮಿಟಿ ಕಳೆದ ಮೂರು ದಿನಗಳಿಂದ ಸಭೆ ನಡೆಸುತ್ತಿದ್ದು, ಸುಮಾರು 170 ಕ್ಷೇತ್ರಗಳ ಅಭ್ಯರ್ಥಿ ಕುರಿತು ಚರ್ಚೆ ಮಾಡಲಾಗಿದ್ದು, ಇನ್ನು 50 ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಬಾಕಿ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ.
ಚರ್ಚೆಯಾಗಿರುವ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಕೇಂದ್ರ ನಾಯಕರಿಗೆ ಕಳುಹಿಸಿಕೊಟ್ಟಿದ್ದೇವೆ. ಎಲ್ಲ ಕಡೆಗಳಲ್ಲಿ ಒಮ್ಮತದ ತೀರ್ಮಾನವನ್ನು ತೆಗೆದುಕೊಂಡಿದ್ದು, ಎಲ್ಲ ಪ್ರಕ್ರಿಯೆ ಸುಗಮವಾಗಿ ಸಾಗುತ್ತಿದೆ.
ಪಕ್ಷದಲ್ಲಿ ನಾಯಕರ ಸಂದಾನ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಇನ್ನು ಕೆಲವು ಕ್ಷೇತ್ರಗಳಲ್ಲಿ ನಾಯಕರುಗಳನ್ನು ಕರೆಸಿ ಚರ್ಚೆ ಮಾಡಬೇಕಿದೆ. ನಾಳೆಯಿಂದ ಎಲ್ಲೆಲ್ಲಿ ಭಿನ್ನಾಭಿಪ್ರಾಯಗಳಿವೆಯೋ ಆ ಕ್ಷೇತ್ರದ ನಾಯಕರನ್ನು ಕರೆಸಿ ಮಾತನಾಡುತ್ತೇವೆ. ಇಂದು ಚಿಕ್ಕಮಗಳೂರು ಜಿಲ್ಲೆ ನಾಯಕರ ಜತೆ ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ, ಬಿಜೆಪಿ ಸರ್ಕಾರ ಸೋಲಿಸಲೇಬೇಕು ಎಂದು ಅನೇಕರಲ್ಲಿ ಆಸೆ ಇದೆ. ಹೀಗಾಗಿ ಎಲ್ಲರ ಜತೆ ಚರ್ಚೆ ಮಾಡಿ ಒಮ್ಮತದ ತೀರ್ಮಾನ ಮಾಡುತ್ತೇವೆ’ ಎಂದರು.
ರಾಜಾಜಿನಗರ ಹಾಗೂ ಚಿಕ್ಕಪೇಟೆ ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, ‘ಈ ಬಗ್ಗೆ ಯಾವ ತೀರ್ಮಾನ ಮಾಡಲಾಗಿದೆ ಎಂದು ಈಗ ಹೇಳುವುದಿಲ್ಲ. ರಾಜ್ಯದಲ್ಲಿ ಪಕ್ಷ ಗೆಲ್ಲುವುದು ಮುಖ್ಯವೇ ಹೊರತು ವ್ಯಕ್ತಿಗಳಲ್ಲ. ಸಾಮಾಜಿಕ ನ್ಯಾಯ ಹಾಗೂ ಪಕ್ಷದ ಗೆಲುವು, ಪಕ್ಷದ ಕುರಿತ ಬದ್ಧತೆ ಗಮನದಲ್ಲಿಟ್ಟುಕೊಂಡು ನಾವು ತೀರ್ಮಾನ ಮಾಡುತ್ತೇವೆ’ ಎಂದರು.
ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಕ್ರೆಡಿಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಈ ಹೆದ್ದಾರಿಯಲ್ಲಿ ಸರ್ಕಾರ ಮೊದಲು ಸರ್ವೀಸ್ ರಸ್ತೆ ಮಾಡಿಕೊಡಲಿ, ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆ ಎನ್ನುತ್ತಾರೆ, ಈ ರಸ್ತೆಯಲ್ಲಿ ಸಾಗುವಾಗ ಗಾಡಿಗಳು ತೊಂದರೆ ಅನುಭವಿಸುತ್ತಿವೆ. ಕಳೆದ ಆರು ತಿಂಗಳಲ್ಲಿ ಎಷ್ಟು ಅಪಘಾತಗಳಾಗಿವೆ. ಹೀಗಾಗಿ ಗುಣಮಟ್ಟದ ಬಗ್ಗೆ ಪರೀಕ್ಷೆ ಮಾಡಲಿ. ಈ ಯೋಜನೆ ಬಿಜೆಪಿ ಅವರ ಕಾಲದಲ್ಲಿ ಆರಂಭವಾಗಿದೆ ಆದರೆ ಈ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆ ಮಾಡಿ ಅದಕ್ಕೆ ಅನುಮತಿ ನೀಡಿ ಶಂಕುಸ್ಥಾಪನೆ ಮಾಡಿದ್ದು ಆಸ್ಕರ್ ಫರ್ನಾಂಡೀಸ್ ಅವರು ಕೇಂದ್ರ ಸಚಿವರಾಗಿದ್ದಾಗ’ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಹೋಗುವವರು ಹೋಗಲಿ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ‘ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಯಾರನ್ನು ಕಳುಹಿಸಲು ಇಚ್ಛೆ ಇದೆಯೋ ಅವರನ್ನು ಕಳುಹಿಸಲಿ. ಹೋಗುವವರನ್ನು ಬೇಡ ಎನ್ನಲು ಆಗುವುದಿಲ್ಲ, ಬರುವವರನ್ನು ತಡೆಯಲು ಆಗುವುದಿಲ್ಲ. ಅವರ ಮಾತಿನಲ್ಲೂ ಸತ್ಯವಿದೆ. ಮಿಕ್ಕ ವಿಚಾರ ನಂತರ ಮಾತನಾಡೋಣ’ ಎಂದು ತಿಳಿಸಿದರು.
ತನಿಖಾ ಸಂಸ್ಥೆಗಳ ದುರ್ಬಳಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಕೇವಲ ವಿರೋಧ ಪಕ್ಷಗಳ ನಾಯಕರನ್ನು ಮಾತ್ರ ತನಿಖಾ ಸಂಸ್ಥೆಗಳು ವಿಚಾರಣೆ ಹೆಸರಲ್ಲಿ ಕಿರುಕುಳ ನೀಡುತ್ತಿವೆ. ತನಿಖಾ ಸಂಸ್ಥೆಗಳ ದುರ್ಬಳಕೆ ಸರಿಯಲ್ಲ. ತನಿಖಾ ಸಂಸ್ಥೆಗಳು ತನ್ನದೇ ಆದ ಅಧಿಕಾರ ಇದ್ದು, ಅವರು ಸ್ವಾಯತ್ತ ರೀತಿಯಲ್ಲಿ ಕೆಲಸ ಮಾಡಬೇಕು. ಯಾರೆಲ್ಲಾ ಅಕ್ರಮ ಮಾಡಿದ್ದಾರೋ ಅವರ ಮೇಲೆ ತನಿಖೆ ಮಾಡಲಿ. ಆದರೆ ಕೇವಲ ವಿರೋಧ ಪಕ್ಷದ ನಾಯಕರನ್ನು ಮಾತ್ರ ಗುರಿ ಮಾಡುತ್ತಿರುವುದು ಸರಿಯಲ್ಲ’ ಎಂದರು.