ಬೆಂಗಳೂರು: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ವೇಳೆ 55 ವರ್ಷ ಮೇಲ್ಪಟ್ಟ ಶಿಕ್ಷಕರು, ಗರ್ಭಿಣಿ ಶಿಕ್ಷಕಿಯರು, ಅಂಗವಿಕಲ ಶಿಕ್ಷಕರಿಗೆ ವಿನಾಯಿತಿ ನೀಡುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್ ಮೀನಾ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ.
55 ವರ್ಷಕ್ಕೂ ಮೇಲ್ಪಟ್ಟ ಶಿಕ್ಷಕರನ್ನು ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಬೇಕು. ವಿಶೇಷವಾಗಿ ಮಹಿಳಾ ಶಿಕ್ಷಕಿಯರನ್ನು ಕರ್ತವ್ಯ ನಿರ್ವಹಿಸುತ್ತಿರುವ ಮತಕ್ಷೇತ್ರ/ತಾಲ್ಲೂಕಿನಲ್ಲಿಯೇ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಕು.
ತೀವ್ರತರ ಕಾಯಿಲೆಯಿಂದ ಬಳಲುತ್ತಿರುವ ಶಿಕ್ಷಕರು, ಗರ್ಭಿಣಿ ಶಿಕ್ಷಕಿಯರು, ಚಿಕ್ಕಮಕ್ಕಳು ಇರುವ ಶಿಕ್ಷಕಿಯರು, ಅಂಗವಿಕಲ/ವಿಶೇಷ ನ್ಯೂನ್ಯತೆಯುಳ್ಳ ಮಕ್ಕಳನ್ನು ಹೊಂದಿರುವ ಶಿಕ್ಷಕಿಯರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದೆ.
ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರನ್ನು ಚುನಾವಣಾ ಕಾರ್ಯ ಮುಗಿದ ನಂತರ ರಾತ್ರಿ ವೇಳೆ ಅವರ ಸ್ಥಳಕ್ಕೆ ತೆರಳಲು ಸೂಕ್ತ ವಾಹನ ವ್ಯವಸ್ಥೆ ಮಾಡಬೇಕು ಎಂದು ವಿನಂತಿಸಿದೆ.
ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವಾಗ ಈ ಮೇಲಿನ ಅಂಶಗಳನ್ನು ಪರಿಗಣಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಂಘ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಮನವಿ ಮಾಡಿದ್ದಾರೆ.