ಕೋಲಾರ: ಕಸ ವಿಲೇವಾರಿ ಕಾರ್ಯ ನಡೆಸುತ್ತಿದ್ದ ವೇಳೆ ಪುರಸಭೆಯ ಕಸ ವಿಲೇವಾರಿ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಪೌರಕಾರ್ಮಿಕ ಮೃತಪಟ್ಟಿದ್ದು, ಮತ್ತೋರ್ವ ಮಹಿಳಾ ಪೌರಕಾರ್ಮಿಕರು ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಇಂದಿರಾನಗರದಲ್ಲಿ ಅಪಘಾತದಲ್ಲಿ ಪೌರ ಕಾರ್ಮಿಕರಾದ ಸಂಪತ್ (35) ಹಾಗೂ ಭೂಲಕ್ಷ್ಮಿ ಗಾಯಗೊಂಡಿದ್ದು, ಇಬ್ಬರನ್ನೂ ತಕ್ಷಣ ಶ್ರೀನಿವಾಸಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು.
ಸಂಪತ್ ಅವರ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಕೋಲಾರ ಆಸ್ಪತ್ರೆಗೆ ಅಂಬುಲೆನ್ಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು. ಆದರೆ, ಕೋಲಾರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಂಪತ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಭೂಲಕ್ಷ್ಮಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
ಘಟನೆ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯಿಂದ ಪುರಸಭೆ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
Laxmi News 24×7