ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ದೇವರಾಜನ್ ತಂಗುದೊರೈ ವಿರುದ್ಧ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಆಡಳಿತ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ.
ಈ ಕ್ರಮಕ್ಕೆ ಮುನ್ನ ಎಬಿವಿಪಿ ಕಾರ್ಯಕರ್ತರು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ತೀವ್ರ ಪ್ರತಿಭಟನೆ ನಡೆಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಆರೋಪಗಳ ಪ್ರಕಾರ, ಪ್ರೊ. ತಂಗುದೊರೈ ತಮ್ಮ ಬಳಿ ಪಿಹೆಚ್‌ಡಿ ಮಾಡಲು ಬಂದಿದ್ದ ವಿದ್ಯಾರ್ಥಿನಿಯೊಂದಿಗೆ ವೈಯಕ್ತಿಕ ಹಾಗೂ ದೈಹಿಕ ಸಂಬಂಧ ಹೊಂದಿದ್ದರು. ಈ ಸಂಬಂಧದ ಕೆಲವು ಫೋಟೋಗಳನ್ನು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ವಿದ್ಯಾರ್ಥಿನಿ ಅಧ್ಯಯನವನ್ನು ಮಧ್ಯದಲ್ಲೇ ಬಿಟ್ಟು ತೆರಳಿದ ನಂತರವೂ ಆಕೆಯನ್ನು ಮರಳಿ ಕರೆಸುವಂತೆ ಇತರ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿತ್ತು.
ಈ ವಿಚಾರ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದರೂ ವಿಶ್ವವಿದ್ಯಾಲಯ ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಬುಧವಾರ ಭಾರೀ ಪ್ರತಿಭಟನೆ ನಡೆಸಿದರು. ಆಡಳಿತ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಹೂವಿನ ಕುಂಡಲಿಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಕೆಲ ಕಾರ್ಯಕರ್ತರು ಕುಲಪತಿ ಕಚೇರಿಯೊಳಗೆ ನುಗ್ಗಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ-ನೂಕಾಟ ನಡೆಯಿತು. ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು.
ಈ ಸಂಬAಧ ಸಿಂಡಿಕೇಟ್ ಸದಸ್ಯರ ಮಧ್ಯೆ ಸಭೆ ನಡೆಸಿ ಪ್ರೊ.ತಂಗುದೊರೈ ಅವರ ಮೇಲೆ ಕ್ರಮ ಕೈಗೊಳ್ಳುವ ಭರವಸೆಯನ್ನು ಕುಲಪತಿಗಳು ನೀಡಿದ ನಂತರವೇ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಕೈಬಿಟ್ಟರು. ಆದರೂ ಪ್ರೊ.ತಂಗುದೊರೈ ಅವರನ್ನು ಅಮಾನತ್ತು ಮಾಡುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಎಬಿವಿಪಿ ಕಾರ್ಯಕರ್ತರು ಸ್ಥಳದಲ್ಲೇ ಕುಳಿತಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವಿಶ್ವವಿದ್ಯಾಲಯ ಆಡಳಿತ ಅಂತಿಮವಾಗಿ ಪ್ರೊ.ದೇವರಾಜನ್ ತಂಗುದೊರೈ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಜೊತೆಗೆ ಪ್ರಕರಣದ ಸಂಪೂರ್ಣ ತನಿಖೆಗಾಗಿ ವಿಶೇಷ ವಿಚಾರಣಾ ಸಮಿತಿಯನ್ನೂ ರಚಿಸಲಾಗಿದೆ.
ಕುಲಪತಿ ಪ್ರೊ. ಎ.ಎಂ. ಖಾನ್ ಮಾತನಾಡಿ, ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚನೆ ನೀಡಲಾಗಿದೆ. ತನಿಖೆಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಆರೋಪಿ ಪ್ರಾಧ್ಯಾಪಕರ ವಿರುದ್ಧ ಪೊಲೀಸ್ ತನಿಖೆಯನ್ನೂ ನಡೆಸಬೇಕು ಎಂದು ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ವಿಶ್ವವಿದ್ಯಾಲಯದ ನೈತಿಕ ಮೌಲ್ಯಗಳನ್ನು ಕಾಪಾಡಲು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಅಗತ್ಯ ಎಂದು ಅವರು ಒತ್ತಾಯಿಸಿದ್ದಾರೆ.
Laxmi News 24×7