ಅಮರಾವತಿ: ಖಾಸಗಿ ಔಷಧ ತಯಾರಿಕಾ ಘಟಕದಲ್ಲಿ ನೀರಿನ ಬಾಯ್ಲರ್ ಸ್ಫೋಟಗೊಂಡು ನಾಲ್ವರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ.
ಬೆಳಗ್ಗೆ ಸುಮಾರು 8 ಗಂಟೆಗೆ ಸ್ಫೋಟ ಸಂಭವಿಸಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಅಧಿಕಾರಿಗಳ ಪ್ರಕಾರ, ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ಮುಂದುವರಿದಿದೆ.
ಸತ್ಯವೇಡು ಮಂಡಲದ ಶ್ರೀ ಸಿಟಿ ವಿಶೇಷ ಆರ್ಥಿಕ ವಲಯದಲ್ಲಿರುವ ಖಾಸಗಿ ಕೈಗಾರಿಕಾ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಹಲವು ಕಾರ್ಮಿಕರು ಸ್ಫೋಟದಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಸ್ಫೋಟದ ಬಳಿಕ ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಕೈಗೊಂಡರು. ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನೆ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳಿಂದ ಘಟನೆಯ ಮಾಹಿತಿ ಪಡೆದ ಅವರು, ಸ್ಫೋಟದಲ್ಲಿ ಸಂಭವಿಸಿದ ಸಾವುಗಳ ಕುರಿತು ವಿಚಾರಿಸಿದ್ದಾರೆ. ಮೃತರ ಕುಟುಂಬಗಳಿಗೆ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ಸೂಚಿಸಿದ್ದು, ಸಂತ್ರಸ್ತ ಕುಟುಂಬಗಳೊಂದಿಗೆ ಅಧಿಕಾರಿಗಳು ನಿಲ್ಲಬೇಕು ಎಂದು ಸೂಚಿಸಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡ ಮಹಿಳೆಯೊಬ್ಬರನ್ನು ಕೃಷ್ಣವೇಣಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರ ಸಂಪೂರ್ಣ ವಿವರಗಳು ಮತ್ತು ಸ್ಫೋಟಕ್ಕೆ ಕಾರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
Laxmi News 24×7