Breaking News

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಸಮಗ್ರ ಚರ್ಚೆಯಾಗಲಿ: ಮಹಾಂತೇಶ ಕವಟಗಿಮಠ

Spread the love

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಯಬೇಕು. ನೀರಾವರಿ, ಶಿಕ್ಷಣ, ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಭಿವೃದ್ಧಿಯಾದ ದಕ್ಷಿಣ ಕರ್ನಾಟಕ ಹಾಗೂ ಅಭಿವೃದ್ಧಿಯಿಂದ ವಂಚಿತವಾಗಿರುವ ಉತ್ತರ ಕರ್ನಾಟಕ ಎಂಬ ಎರಡು ಕರ್ನಾಟಕಗಳಿವೆ. ಪ್ರಾದೇಶಿಕ ಅಸಮತೋಲನ ನಿವಾರಿಸುವ ಉದ್ದೇಶದಿಂದ ಸುವರ್ಣ ವಿಧಾನಸೌಧ ನಿರ್ಮಿಸಲಾಗಿದೆ. ಆದರೆ ಈವರೆಗೆ 14 ಬಾರಿ ಇಲ್ಲಿ ವಿಧಾನಮಂಡಲ ಅಧಿವೇಶನ ನಡೆದಿದ್ದರೂ, ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ಮಾತ್ರ ನಡೆದಿದೆಯೇ ಹೊರತು ನಿರೀಕ್ಷಿತ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಗಳು ಹಿಂದೆ ಮೈಸೂರು ಪ್ರಾಂತ್ಯದ ಆಡಳಿತಕ್ಕೆ ಒಳಪಟ್ಟಿರಲಿಲ್ಲ. ಉತ್ತರ ಕರ್ನಾಟಕದ ಕೆಲವು ಭಾಗಗಳು ಬಾಂಬೆ ಪ್ರಾಂತ್ಯದ ಆಡಳಿತದಲ್ಲಿದ್ದರೆ, ಕಲ್ಯಾಣ ಕರ್ನಾಟಕ ನಿಜಾಮರ ಆಡಳಿತದಲ್ಲಿತ್ತು. ನಂಜುಂಡಪ್ಪ ವರದಿಯ ಪ್ರಕಾರ ಉತ್ತರ ಕರ್ನಾಟಕದ 85 ತಾಲೂಕುಗಳು ಹಿಂದುಳಿದಿವೆ. ಇದಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯೇ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿದರು.

ಉತ್ತರ ಕರ್ನಾಟಕದಲ್ಲಿ ಉದ್ಯೋಗಾವಕಾಶಗಳು, ಗುಣಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದ ಜನರು ಉದ್ಯೋಗ ಅರಸಿ ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕಾದರೆ ರಾಜ್ಯ ಸರ್ಕಾರ ಉತ್ತರ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಏಮ್ಸ್ ಮಾದರಿಯ ಉನ್ನತ ಮಟ್ಟದ ಆಸ್ಪತ್ರೆಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

**ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಗೊಳಿಸಲು ವಿಫಲ**

ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬರುವ ಮುನ್ನ ‘ನಮ್ಮ ನಡಿಗೆ ಕೃಷ್ಣೆಯ ಕಡೆಗೆ’ ಎಂಬ ಹೆಸರಿನಲ್ಲಿ ಪಾದಯಾತ್ರೆ ನಡೆಸಿದ್ದರು. ಇದೀಗ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದರೂ ಕೃಷ್ಣಾ ಮೇಲ್ದಂಡೆ ಯೋಜನೆಗೆ ನಿರೀಕ್ಷಿತ ವೇಗ ದೊರೆತಿಲ್ಲ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಕಾರ್ಯವೈಖರಿ ಪ್ರಶ್ನಾರ್ಹವಾಗಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ 30 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕಳೆದ 15 ವರ್ಷಗಳಿಂದ ಶಿಕ್ಷಕರ ನೇಮಕಾತಿ ಸಮರ್ಪಕವಾಗಿ ನಡೆದಿಲ್ಲ. ಅದರಲ್ಲೂ ಗಣಿತ ಮತ್ತು ವಿಜ್ಞಾನ ಶಿಕ್ಷಕರ ಕೊರತೆ ಹೆಚ್ಚಾಗಿದೆ. ಇದರಿಂದ ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಹುಬ್ಬಳ್ಳಿ-ಧಾರವಾಡ ಮಧ್ಯೆ ಬೆಂಗಳೂರಿನ ಮಾದರಿಯಲ್ಲಿ ಮೆಟ್ರೋ ಯೋಜನೆ ಜಾರಿಗೊಳಿಸಬೇಕು. ಉತ್ತರ ಕರ್ನಾಟಕಕ್ಕೆ ಸಮರ್ಪಕ ನೀರಾವರಿ, ಗುಣಮಟ್ಟದ ಶಿಕ್ಷಣ, ಮೂಲಭೂತ ಸೌಕರ್ಯ ಹಾಗೂ ಕೈಗಾರಿಕೆಗಳು ಬಂದರೆ ಮಾತ್ರ ಈ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಹೇಳಿದರು.

ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಕೇವಲ ಚರ್ಚೆಗೆ ಸೀಮಿತವಾಗದೆ, ಉತ್ತರ ಕರ್ನಾಟಕದ ಜನರ ದಶಕಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಧಿವೇಶನವಾಗಬೇಕು. ಈ ಬಾರಿಯಾದರೂ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸ್ಪಷ್ಟ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಮಹಾಂತೇಶ ಕವಟಗಿಮಠ ಒತ್ತಾಯಿಸಿದರು.


Spread the love

About Laxminews 24x7

Check Also

ಒಂದು ತಿಂಗಳು ಕಳೆದರೆ ಹಸೆಮಣೆ ಏರಬೇಕಿದ್ದ ಯುವತಿ ನೇಣಿಗೆ ಶರಣು; ಕೊರಳಲ್ಲಿ ತಾಳಿ ಕಂಡು ಬೆಚ್ಚಿಬಿದ್ದ ಕುಟುಂಬಸ್ಥರು

Spread the loveಬೆಂಗಳೂರು: ಮದುವೆಗೆ ಒಂದು ತಿಂಗಳು ಬಾಕಿ ಇರುವಾಗಲೇ ಯುವತಿ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ನಗರದ ಕೆ.ಪಿ. ಅಗ್ರಹಾರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ