ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ ಮಾಹಿತಿ ಹೊರಬಿದ್ದಿದ್ದು, ಘಟನೆಗೆ ಮುಂಚೆಯೇ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ.
ಪೊಲೀಸರ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಯಲಿರುವ ಮಾಹಿತಿ ಸಿಕ್ಕ ತಕ್ಷಣವೇ ದಾಳಿ ನಡೆಸಲು ಆರೋಪಿಗಳು ಪ್ಲ್ಯಾನ್ ಮಾಡಿದ್ದಾರೆ.
ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ತನ್ನ ಚಾಲಕನ ಮೂಲಕ ಪೆಪ್ಪರ್ ಸ್ಪ್ರೇ ಖರೀದಿಸಿದ್ದ ಎನ್ನುವ ಮಾಹಿತಿಯೂ ತನಿಖೆಯಲ್ಲಿ ಗೊತ್ತಾಗಿದೆ. ಕಾರ್ಯಾಚರಣೆ ವೇಳೆ ಪೊಲೀಸರು ಮತ್ತು ಮಾಧ್ಯಮದವರು ಸ್ಥಳದಲ್ಲಿ ಇಲ್ಲದ ಸಮಯ ನೋಡಿಕೊಂಡು ದಾಳಿ ನಡೆಸುವಂತೆ ಸಂಚು ರೂಪಿಸಲಾಗಿತ್ತು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.
ಹಲ್ಲೆಯ ನಂತರ ಪ್ರಕರಣಕ್ಕೆ ಕನ್ನಡ ಧ್ವಜ ಮತ್ತು ಗಣೇಶ ದೇವಸ್ಥಾನದ ವಿಚಾರವನ್ನು ಜೋಡಿಸಿ ಬೇರೆ ದಿಕ್ಕಿಗೆ ತಿರುಗಿಸುವ ಯೋಜನೆಯೂ ಇದ್ದಿತ್ತು ಎಂಬ ಅನುಮಾನವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ಬಹುತೇಕ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ.
Laxmi News 24×7