ಬೆಳಗಾವಿ: ಜಿಲ್ಲೆಯಲ್ಲಿ ಹಣ್ಣು ಹಂಪಲು ಮಾರಾಟ ಮಾಡಲು ತೊಂದರೆಯಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದ್ದು, ರೈತರ ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ರಾಜ್ಯದ ಕೊಂಡಿಯಾಗಿರುವ ಗಡಿ ಜಿಲ್ಲೆಯಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ರೈತರು ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಸಮಸ್ಯೆ ಬಂದರು ಎದುರಿಸಲು ಸರ್ಕಾರ ಸಿದ್ಧವಾಗಿದೆ.ಮಾರಕ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸಾಮಾಜಿಕ ಅಂತರವೊಂದೆ ಮಾರ್ಗವಾಗಿದೆ. ಸಾಮಾಜಿಕ ನಿರ್ಬಂಧ ಹೇರಿಕೊಳ್ಳುವುದು ಅನಿವಾರ್ಯವಾಗಿದೆ ಎಂದರು.
ಬಳಿಕ ಸಚಿವ ಬಿ.ಸಿ. ಪಾಟೀಲ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಿದರು.
ರೈತರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚೆ ನಡೆಸಿ, ಗೊಬ್ಬರ ಹಾಗೂ ಬೀಜ ವಿತರಿಸುವ ಬಗ್ಗೆ ನಿರ್ದೇಶನ ನೀಡಿದರು. ಲಾಕ್ ಡೌನ್ ಹಿನ್ನೆಲೆ ರೈತರಿಗೆ ಆದ ಸಂಕಷ್ಟದ ಕುರಿತು ಮಾಹಿತಿ ಹಾಗೂ ಪರಿಹಾರ ಕ್ರಮದ ಬಗ್ಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಎಂಎಲ್ ಸಿ ಮಹಾಂತೇಶ ಕವಟಗಿಮಠ, ಶಾಸಕರಾದ ಸತೀಶ ಜಾರಕಿಹೊಳಿ, ಅನಿಲ ಬೆನಕೆ, ಜಿಲ್ಲಾಧಿಕಾರಿ ಬೊಮ್ಮನಹಳ್ಳಿ, ಜಿಲ್ಲಾ ವೈದ್ಯಾಧಿಕಾರಿ ಮುನ್ಯಾಳ, ಜಿ.ಪಂ. ಸಿಇಒ ರಾಜೇಂದ್ರ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಇದ್ದರು