ಬೆಳಗಾವಿ: ‘ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 30ರಿಂದ ಮೂರು ದಿನಗಳವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಒಳಗಡೆ ಹಾಗೂ ಸುತ್ತಲೂ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.
‘ಬೆಳಗಾವಿ, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಗೋಕಾಕ, ಚಿಕ್ಕೋಡಿ, ಅಥಣಿ, ರಾಯಬಾಗ ಹಾಗೂ ಹುಕ್ಕೇರಿ ತಾಲ್ಲೂಕುಗಳಲ್ಲಿ ಬೆಳಿಗ್ಗೆ 10.30ರಿಂದ 11.50ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ 3.50ರವರೆಗೆ ಪರೀಕ್ಷೆ ಇರುತ್ತದೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 14 ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 15 ಕೇಂದ್ರಗಳಿವೆ’ ಎಂದು ಮಾಹಿತಿ ನೀಡಿದರು.
ಪರೀಕ್ಷೆಗೆ ಮುನ್ನ ಕೇಂದ್ರದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಶೌಚಾಲಯಗಳನ್ನು ಸ್ವಚ್ಛಗೊಳಿಸಬೇಕು. ಪ್ರತಿ ವಿದ್ಯಾರ್ಥಿಯನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು. ಮಾಸ್ಕ್ ಧರಿಸುವಂತೆ ಸೂಚಿಸಬೇಕು. ಒಂದು ಕೇಂದ್ರವನ್ನು ಹೆಚ್ಚುವರಿಯಾಗಿ ಮೀಸಲಿಡಬೇಕು. ಪರೀಕ್ಷಾ ದಿನದಂದು ಯಾವುದಾದರೂ ಕೇಂದ್ರ ಕಂಟೈನ್ಮೆಂಟ್ ಜೋನ್ ವ್ಯಾಪ್ತಿಯಲ್ಲಿ ಬಂದರೆ ಮೀಸಲಿಡುವ ಕೇಂದ್ರದಲ್ಲಿ ಪರೀಕ್ಷೆ ನಡೆಸಬೇಕು’ ಎಂದು ತಿಳಿಸಿದರು.
‘ಒಂದು ಕೇಂದ್ರಕ್ಕೆ 500 ವಿದ್ಯಾರ್ಥಿಗಳು ಇರುವುದರಿಂದ ಥರ್ಮಲ್ ಸ್ಕ್ರೀನಿಂಗ್ ಕೆಲಸಕ್ಕೆ ಮೂವರು ಸಿಬ್ಬಂದಿ ನೇಮಿಸಬೇಕು. ಅಗ್ಯತ ಕ್ರಮ ವಹಿಸಿದೆ ನಿರ್ಲಕ್ಷ್ಯ ತೋರಿಸಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ, ‘ಕಂಟೈನ್ಮೆಂಟ್ ಜೋನ್ ಅಥವಾ ಸೋಂಕಿತರ ಜೊತೆ ವಿದ್ಯಾರ್ಥಿಗಳು ಸಂಪರ್ಕ ಹೊಂದಿರುವ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳಿಗೆ ಅಗತ್ಯ ವ್ಯವಸ್ಥೆ ಮಾಡಬೇಕು’ ಎಂದು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಕೆ.ಎಚ್, ಎಎಸ್ಪಿ ಅಮರನಾಥ ರೆಡ್ಡಿ, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಎಸಿಪಿ ಮಹಾಂತೇಶ ಇದ್ದರು.