Breaking News

ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ

Spread the love

ಬೆಂಗಳೂರು, ಸೆ. 29: `ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು’ ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, `ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿ.ಜೆ.ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ.

ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು’ ಎಂದು ಪ್ರತಿಪಾದಿಸಿದ್ದಾರೆ.

‘ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭಾ ಕ್ಷೇತ್ರ ಮಾತ್ರ ಅಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ದ್ರುವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

‘ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಬಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ!’ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು

Spread the loveಚಿತ್ರದುರ್ಗ, ಆಗಸ್ಟ್​ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್​​ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್​ಪಿ ಪಿ.ದಿನಕರ್, ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ