ಬೆಂಗಳೂರು, ಜೂ.4-ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಂಸದರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನ ನೀಡಲಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಾಳೆ ಮಧ್ಯಾಹ್ನ ಸಭೆ ನಡೆಯಲಿದೆ.
ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವುದು, ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಈ ಬಾರಿಯ ರಾಜ್ಯ ಸಭೆ ಚುನಾವಣೆಗೆ ದೇವೇಗೌಡರು ಸ್ಪರ್ಧಿಸುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸುತ್ತಿರುವ ವಿಚಾರದ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತದೆ.
ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರದ ಬಗ್ಗೆ ಗಂಭೀರ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.ರಾಜ್ಯಸಭೆ ಸ್ಥಾನವನ್ನು ಕಾಂಗ್ರೆಸ್ ಬಿಟ್ಟುಕೊಟ್ಟರೆ, ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಜೆಡಿಎಸ್‍ಗೆ ಬಿಟ್ಟುಕೊಡುವ ಪ್ರಸ್ತಾಪ ಹಾಗೂ ರಾಜ್ಯಸಭೆಗೆ ಕಾಂಗ್ರೆಸ್ ಬೆಂಬಲ ಪಡೆಯುವ ಕುರಿತು ಗಂಭೀರ ಚರ್ಚೆ ನಡೆಯಲಿದೆ.
ವಿಧಾನ ಪರಿಷತ್ ಚುನಾವಣೆಗೆ ಪಕ್ಷದಲ್ಲಿ ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿರುವ ಬಗ್ಗೆಯೂ ಸಮಾಲೋಚನೆ ನಡೆಸಿ ಶಾಸಕರ ಅಭಿಪ್ರಾಯ ಪಡೆಯಲಾಗುತ್ತದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಮರು ಆಯ್ಕೆಯಾಗಲು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಬಯಸಿದ್ದಾರೆ.