ಬೆಂಗಳೂರು: ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯೊಂದು ಇಂದು ಬೋನಿಗೆ ಬಿದ್ದಿದೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ಬಳಿಯ ಸೀಗೆಪಾಳ್ಯ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಅನೇಕ ದಿನಗಳಿಂದ ಉಪಟಳ ನೀಡುತ್ತಿದ್ದ ಸುಮಾರು 8 ವರ್ಷದ ಗಂಡು ಚಿರತೆಯನ್ನು ಅರಣ್ಯ ಅಧಿಕಾರಿಗಳು ಬೋನ್ ಇಟ್ಟು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಈ ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಚಿರತೆ ಸೆರೆಯಾದ ಸ್ಥಳಕ್ಕೆ ನೆಲಮಂಗಲ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಚಿರತೆಯನ್ನು ಬಿಡುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಈ ವೇಳೆ ಸ್ಥಳೀಯ ಸಿದ್ಧರಾಜು ಮಾತನಾಡಿ, ಶಿವಗಂಗೆ ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಕಾಡುಪ್ರಾಣಿಗಳು ಗ್ರಾಮದತ್ತ ಬರುತ್ತಿವೆ. ಅರಣ್ಯ ಅಧಿಕಾರಿಗಳು ಕಾಡು ಪ್ರಾಣಿಗಳ ಸಂತತಿ ಉಳಿಸುವ ನಿಟ್ಟಿನಲ್ಲಿ ನಾಡಿನತ್ತ ಬರುತ್ತಿರುವ ಪ್ರಾಣಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ. ಅಲ್ಲದೆ ಈ ಚಿರತೆ ಕಳೆದ ಒಂದು ತಿಂಗಳಿನಿಂದ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟುಮಾಡಿತ್ತು. ಸದ್ಯ ಕಳೆದ ರಾತ್ರಿ ಆಹಾರ ಹರಸಿ ಬಂದ ಚಿರತೆ ಅರಣ್ಯಾಧಿಕಾರಿಗಳು ಅಳವಡಿಸಿದ್ದ ಬೋನಿನಲ್ಲಿ ಸೆರೆಯಾಗಿದೆ ಎಂದು ಅರಣ್ಯಾಧಿಕಾರಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

Laxmi News 24×7