ಬೆಂಗಳೂರು-ಕೊರೋನಾ ಸೋಂಕು ದೃಡಪಟ್ಟು ಮೃತಪಟ್ಟವರನ್ನು ಅತ್ಯಂತ ಅಮಾನವೀಯವಾಗಿ ಅಂತ್ಯ ಸಂಸ್ಕಾರ ನಡೆಸಿದ್ದ ಬಳ್ಳಾರಿ ಜಿಲ್ಲೆಯ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಸೇವೆಯಿಂದ ಅಮಾನತು ಪಡಿಸಿದೆ.
ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದರು.ಇದರಿಂದ ತಕ್ಷಣವೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅಂತ್ಯಸಂಸ್ಕಾರ ಮಾಡಿದ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತು ಪಡಿಸಿದೆ.
ಇ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ರಾಮುಲು ಅವರು ಟ್ವೀಟ್ ಮಾಡಿದ್ದಾರೆ.ಇನ್ನು ಘಟನೆಗೆ ಬಳ್ಳಾರಿ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಕ್ಷೇಮೆ ಕೋರಿದೆ.ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮತೆಗೆದುಕೊಳ್ಳುವುದಾಗಿ ಹೇಳಿದೆ.
ಜಿಲ್ಲೆಯಲ್ಲಿ ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್ನ ನುರಿತ ತಂಡವನ್ನು ನೇಮಕ ಮಾಡಿದೆ.ಬಳ್ಳಾರಿ ಜಿಲ್ಲೆಯಲ್ಲಿ ಅಂತ್ಯಕ್ರಿಯೆ ವೇಳೆ ಒಂದೇ ಗುಂಡಿಗೆ ಸೋಂಕಿತರ ಎರಡೆರಡು ಮೃತದೇಹ ಹಾಕಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿಯವರು ಸೋಂಕಿತರ ಮೃತದೇಹವನ್ನು ದರದರನೆ ಎಳೆದು ಗುಂಡಿಗೆ ಎಸೆದಿದ್ದರು. ಇದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿತ್ತು.
# ಯಡಿಯೂರಪ್ಪ ಟ್ವೀಟ್ :
ಕೋವಿಡ್19 ರಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಪ್ರತ್ಯೇಕ ನಿಯಮಾವಳಿಗಳಿದ್ದು ಅವುಗಳನ್ನು ಪಾಲಿಸಲು ಇಲಾಖೆಯ ಎಲ್ಲ ಸಿಬ್ಬಂದಿಯಲ್ಲಿ ಮನವಿ ಮಾಡಿಕೊಳ್ಳುತ್ತೇನೆ.
ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಸಿಬ್ಬಂದಿ ನಡವಳಿಕೆ ಅತ್ಯಂತ ಅಮಾನವೀಯ ಹಾಗೂ ತೀವ್ರ ನೋವಿನ ಸಂಗತಿ.
ಕೋವಿಡ್ ಸೋಂಕಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ, ಸೋಂಕಿತರ ಅಂತ್ಯ ಸಂಸ್ಕಾರವನ್ನು ಗೌರವದಿಂದ ನೆರವೇರಿಸಿ ಎಂದು ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗೆ ವಿನಂತಿಸುತ್ತೇನೆ. ಮಾನವೀಯತೆಯಿಂದ ನಡೆದುಕೊಳ್ಳೋಣ, ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ.
# ರಾಮುಲು ಟ್ವೀಟ್ :
ಬಳ್ಳಾರಿ ಜಿಲ್ಲೆಯಲ್ಲಿ #ಕೋವಿಡ್19 ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ವೇಳೆ ಸಿಬ್ಬಂದಿ ಅಮಾನವೀಯವಾಗಿ ನಡೆದುಕೊಂಡಿರುವುದು ತೀವ್ರ ಖಂಡನಿಯ.
ಈ ಪ್ರಕರಣದ ಮಾಹಿತಿ ಪಡೆದುಕೊಳ್ಳಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಅಂತ್ಯಸಂಸ್ಕಾರ ನಡೆಸಿದ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡಿರುವುದಲ್ಲದೆ, ಅಂತ್ಯ ಸಂಸ್ಕಾರವನ್ನು ಸೂಕ್ತ ಹಾಗೂ ಸಕಲ ಗೌರವಗಳಿಂದ ನೆರವೇರಿಸುವುದು ನಮ್ಮ ಸಂಸ್ಕೃತಿ.
ಸೋಂಕಿನಿಂದ ಮೃತಪಟ್ಟವರು ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡದೆ ಸಲ್ಲಿಸಬೇಕಾದ ಗೌರವ ಸಲ್ಲಿಸೋಣ. ಮಾನವೀಯತೆ ಮೆರೆಯೋಣ.