ಬೆಂಗಳೂರು : ರಾಜ್ಯ ಬಿಜೆಪಿ ಸರಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದ್ದು, ಈ ಭಾಗದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಆರೋಪಿಸಿದ್ದು, ಬಜೆಟ್ ನಲ್ಲಿ ಹಂಚಿಕೆ ಮಾಡಿದ್ದ ಹಣವನ್ನೂ ಕಡಿತ ಮಾಡಿರುವುದು ಇದಕ್ಕೆ ಜ್ವಲಂತ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯ ಹೆಸರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಎಂದು ಮರುನಾಮಕರಣ ಮಾಡಿದ ಮಾತ್ರಕ್ಕೆ ತೀವ್ರ ಹಿಂದುಳಿದಿರುವ ಪ್ರದೇಶ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂಬುದನ್ನು ಸರಕಾರ ಮನಗಾಣಬೇಕು. ಜನರನ್ನು ಮರುಳು ಮಾಡುವ ಪ್ರಯತ್ನ ಕೈಬಿಟ್ಟು ಪ್ರಾದೇಶಿಕ ಅಸಮತೋಲನದಿಂದ ಬಳಲುತ್ತಿರುವ ವಲಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
2019-20ರ ಸಾಲಿನ ಬಜೆಟ್ ನಲ್ಲಿ ಘೋಷಣೆಯಾಗಿದ್ದ 1500 ಕೋಟಿ ರೂ.ಅನುದಾನದಲ್ಲಿ 1125 ಕೋಟಿ ರೂ.ಬಿಡುಗಡೆಯಾಗಿದ್ದು, 375 ಕೋಟಿ ರೂ.ಇನ್ನೂ ಬಿಡುಗಡೆ ಆಗಿಲ್ಲ. 2020-21ರ ಸಾಲಿನಲ್ಲಿ 2000 ಕೋಟಿ ರೂ.ನೀಡುವಂತೆ ಕೇಳಿದ್ದರೂ, 1500 ಕೋಟಿ ರೂ.ಮೀಸಲಿಟ್ಟರು, ಅದರಲ್ಲಿ 1136.86 ಕೋಟಿ ರೂ.ಕ್ರಿಯಾ ಯೋಜನೆ ಮಾಡಿದ್ದಾರೆ. 2020-21ರಲ್ಲಿ ಇಲ್ಲಿಯವರೆಗೆ ಆರು ತಿಂಗಳಲ್ಲಿ ಒಂದೇ ಒಂದು ಕ್ರಿಯಾ ಯೋಜನೆಗೆ ಅನುಮೋದನೆ ನೀಡಿಲ್ಲ. ಇದು ಕಲ್ಯಾಣ ಕರ್ನಾಟಕಕ್ಕೆ ಮಾಡಿದ ಘನ ಘೋರ ಅನ್ಯಾಯ ಎಂದು ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.
ಹಿಂದಿನ ಕಾಂಗ್ರೆಸ್ ಸರಕಾರ 371 (ಜೆ) ಅನ್ವಯ ಹೈ ಕ ಭಾಗದಲ್ಲಿ ಖಾಲಿಯಿರುವ 40 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ನಿರ್ಣಯ ಕೈಗೊಂಡು ನೇಮಕಾತಿ ಪ್ರಕ್ರಿಯೆ ಆರಂಭ ಮಾಡಿತ್ತು. ಸಾವಿರಾರು ಅಭ್ಯರ್ಥಿಗಳಿಗೆ ಉದ್ಯೋಗ ಲಭಿಸಿತ್ತು. ಆದರೆ ಬಿಜೆಪಿ ಸರಕಾರ ಖಾಲಿ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಸ್ಥಗಿತ ಮಾಡಿದ್ದು, 40 ಸಾವಿರ ಖಾಲಿ ಹುದ್ದೆ ಭರ್ತಿ ಮಾಡುವಲ್ಲಿ ವಿಫಲವಾಗಿದೆ ಎಂದು ಅವರು ದೂರಿದ್ದಾರೆ.
2013 ರಿಂದ 2019-20 ರವರೆಗೆ ಕಾಂಗ್ರೆಸ್ ಹಾಗೂ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಬಿಡುಗಡೆಯಾದ 4803.95 ಕೋಟಿ ರೂ.ಅನುದಾನ ಹೊರತುಪಡಿಸಿ ಬಿಜೆಪಿ ಸರಕಾರ ಬಂದ ಮೇಲೆ ಈವರೆಗೆ ಬಿಡುಗಡೆ ಮಾಡಿದ್ದು ಕೇವಲ 282.95 ಕೋಟಿ ರೂ.ಮಾತ್ರ. ಇದರ ಜೊತೆಗೆ ಗಾಯದ ಮೇಲೆ ಬರೆ ಎಳೆದಂತೆ ಹಂಚಿಕೆ ಮಾಡಿದ್ದ ಹಣಕ್ಕೂ ಸರಕಾರ ಖೋತಾ ಮಾಡುತ್ತಿದೆ ಎಂದು ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.
ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಈ ಭಾಗಕ್ಕೆ ಆಗಮಿಸುತ್ತಿದ್ದು, ಕಲ್ಯಾಣ ಕರ್ನಾಟಕದಲ್ಲಿ ರಸ್ತೆ, ರೈಲು ಮಾರ್ಗ, ಬಸ್ ನಿಲ್ದಾಣ, ವಸತಿ ನಿಲಯ, ನೀರಾವರಿ ಯೋಜನೆ ಸೇರಿದಂತೆ ಮೂಲಭೂತ ಸೌಕರ್ಯ ಕಾಮಗಾರಿ ಆರಂಭಿಸಬೇಕು, 14 ತಿಂಗಳಲ್ಲಿ ಆಗಿರುವ ನಿರ್ಲಕ್ಷ್ಯ ಸರಿಪಡಿಸಿ, ತಕ್ಷಣವೇ ಅವಶ್ಯಕತೆ ಇರುವ 2000 ಕೋಟಿ ರೂ. ಹಾಗೂ ಹಿಂದಿನ ಸಾಲಿನ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಅಭಿವೃದ್ಧಿಗೆ ಗಮನ ಹರಿಸಬೇಕು, ಖಾಲಿ ಹುದ್ದೆ ಭರ್ತಿಗೆ ಮತ್ತು ನೈಜವಾಗಿ ಈ ಭಾಗದ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದು ಈಶ್ವರ ಖಂಡ್ರೆ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??