ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಮತ್ತೆ 35 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 340ಕ್ಕೆ ಏರಿಕೆಯಾಗಿದೆ.
ಕಳೆದ ಆಗಸ್ಟ್ 11ರಂದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದ್ದ ಪೋಸ್ಟ್ ಗೆ ಸಂಬಂಧಿಸಿದಂತೆ ಪ್ರತಿಭಟನೆ ಹೆಸರಲ್ಲಿ ಗಲಭೆ ನಡೆಸಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಗೊಂಡಿದ್ದು, ಈ ವರೆಗೂ 340 ಮಂದಿಯನ್ನು ಬಂಧಿಸಿದ್ದಾರೆ. ನಿನ್ನೆ ಒಂದೇ ದಿನ 85 ಮಂದಿಯನ್ನು ಬಂಧಿಸಿದ್ದು, ಇಂದು ಮತ್ತೆ 35 ಮಂದಿಯನ್ನು ಬಂಧಿಸಿದ್ದಾರೆ.
45 ಎಫ್ ಐಆರ್, ಬಂಧಿತರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ
ಇನ್ನು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಪೊಲೀಸರು 45 ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಅಲ್ಲದೆ ಗಲಭೆ ಪ್ರಕರಣದಲ್ಲಿ ಭಾಗಿಯಾಗಿರುವವರಿಗಾಗಿ ಪೊಲೀಸರು ಶೋಧ ನಡೆಸಿದ್ದು, ಬಂಧಿತರ ಸಂಖ್ಯೆ 1 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ. ಈಗಾಗಲೇ 340ಮಂದಿಯನ್ನು ಬಂಧಿಸಲಾಗಿದೆ. ಬಂಧಿತರು ನೀಡಿರುವ ಮಾಹಿತಿ ಮೇರೆಗೆ ಮತ್ತಷ್ಟು ಮಂದಿಯನ್ನು ಪೊಲೀಸರು ಬಂಧಿಸಲಿದ್ದಾರೆ ಎಂದು ತಿಳಿದುಬಂದಿದೆ.