ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಾಗೂ ಸರ್ಕಾರದ ಕೆಲ ನೀತಿಗಳನ್ನ ವಿರೋಧಿಸಿ ಇಂದು ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗ್ಗೆ 11ಕ್ಕೆ ಪ್ರಾರಂಭವಾಗುವ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್ವರೆಗೂ ನಡೆಯಲಿದೆ. ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರಶೇಖರ್ ಮೊದಲಾದವರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಈಗಾಗಲೇ ಮುಂಜಾನೆಯೇ ಸಾವಿರಾರು ರೈತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ.
ರಾಜ್ಯದ ನಾನಾ ಜಿಲ್ಲೆಗಳಿಂದ ಬಂದಿರುವ 3 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ರೈತರು ಈ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕಾರ್ಮಿಕರು ಮತ್ತು ದಲಿತ ಸಂಘಟನೆಗಳೂ ಕೂಡ ಪ್ರತಿಭಟನೆಯಲ್ಲಿ ರೈತರಿಗೆ ಬೆಂಬಲ ನೀಡಿವೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ರೈತರ ಪ್ರತಿಭಟನೆ ಹೆಚ್ಚು ತೀಕ್ಷ್ಣತೆ ಪಡೆದುಕೊಂಡಿದೆ.
ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆಗಳನ್ನ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗೆಯೇ, ಕೇಂದ್ರ ಸರ್ಕಾರದ ಕೃಷಿ ಮಸೂದೆಗಳಿಗೂ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಕೋವಿಡ್ ಸಂಕಷ್ಟ ಬಂದ ನಂತರ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ರೈತರ ಪ್ರತಿಭಟನೆ ಇದಾಗಿದೆ