ಬೆಂಗಳೂರು, ಜೂ.30- ಕೊರೊನಾ ವಾರಿಯರ್ಸ್‍ಗಳಾಗಿ ಕೆಲಸ ಮಾಡುವ ಖಾಸಗಿ ಮತ್ತು ಅರೆಕಾಲಿಕ ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿಗಳಿಗೂ 50 ಲಕ್ಷ ವಿಮಾ ಸೌಲಭ್ಯವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿಂದು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಜತೆ ಸಭೆ ನಡೆಸಿದ ಅವರು, ಕೊರೊನಾ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುವಂತೆ ಮನವಿ ಮಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೊರೊನಾ ವಾರಿಯರ್ಸ್‍ಗಳಾಗಿ ಕೆಲಸ ಮಾಡುವ ವೈದ್ಯಕೀಯ ಕ್ಷೇತ್ರದವರಿಗೆ 50 ಲಕ್ಷ ರೂ. ವಿಮಾ ಸೌಲಭ್ಯವನ್ನು ಘೋಷಣೆ ಮಾಡಿದ್ದಾರೆ. ಈವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಈ ವಿಮಾ ಸೌಲಭ್ಯ ನೀಡಲಾಗುತ್ತಿತ್ತು.
ಇತ್ತೀಚೆಗೆ ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹಾಗಾಗಿ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ನೀಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಬ್ಬರು ಸರ್ಕಾರಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿಗೆ ಸುರಕ್ಷತಾ ಸಲಕರಣೆಗಳಿವೆ. ಮರಣ ಸಂಭವಿಸಿದರೆ 50 ಲಕ್ಷ ವಿಮಾ ಸೌಲಭ್ಯವಿದೆ.
ಆದರೆ, ಖಾಸಗಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ, ಪ್ಯಾರಾ ಮೆಡಿಕಲ್ ಸಿಬ್ಬಂದಿಗೆ, ಸಫಾಯಿ ಕರ್ಮಚಾರಿ ಸಿಬ್ಬಂದಿಗಳಿಗೆ ಯಾವುದೇ ಭದ್ರತೆ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೇಂದ್ರ ಸರ್ಕಾರದ ವಿಮಾ ಸೌಲಭ್ಯವನ್ನು ಕೊರೊನಾ ನಿಯಂತ್ರಣಕ್ಕಾಗಿ ದುಡಿಯುವ ಖಾಸಗಿ ವೈದ್ಯರಿಗೆ, ಅರೆಕಾಲಿಕ ವೈದ್ಯರಿಗೆ, ಪ್ಯಾರಾ ಮೆಡಿಕಲ್ ಸಿಬ್ಬಂದಿಗಳಿಗೆ ಮತ್ತು ಖಾಸಗಿ ಮೆಡಿಕಲ್ ಕಾಲೇಜುಗಳ ವೈದ್ಯಕೀಯೇತರ ಸಿಬ್ಬಂದಿಗಳಿಗೂ ವಿಮಾ ಸೌಲಭ್ಯ ನೀಡುವುದಾಗಿ ಪ್ರಕಟಿಸಿದರು.
ಈ ಸಂದರ್ಭದಲ್ಲಿ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರು ಮಾತನಾಡಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಜತೆ ಸಂಪೂರ್ಣ ಸಹಕಾರ ನೀಡುತ್ತೇವೆ. ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳನ್ನು ಬಿಟ್ಟುಕೊಡುತ್ತೇವೆ. ಚಿಕಿತ್ಸೆಗೆ ನಮ್ಮ ಸಿಬ್ಬಂದಿಗಳು, ವೈದ್ಯರು ಕೂಡ ಶ್ರಮಿಸಲಿದ್ದಾರೆ ಎಂದು ಭರವಸೆ ನೀಡಿದರು.
ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್‍ಭಾಸ್ಕರ್, ಖಾಸಗಿ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.