ಬೆಳಗಾವಿ: ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡುವಂತೆ ಮನವಿಮಾಡಲು ಮುಂದಿನ ವಾರ ನಾನು ದೆಹಲಿಗೆ ತೆರಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ. ಪರಿಹಾರದ ಕುರಿತು ಶಾಸಕರೊಂದಿಗೆ ಶೀಘ್ರಸಭೆಕರೆದು ಯೋಜನೆ ರೂಪಿಸುವುದಾಗಿ ತಿಳಿಸಿದ್ದಾರೆ, ಹಾಗೂ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೇಂದ್ರಕ್ಕೂ ಕಳಿಸುವುದಾಗಿ ತಿಳಿಸಿದ್ದಾರೆ. ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು, ಸದ್ಯ ಕೊರೊನಾ ಇರುವುದರಿಂದ ಎನ್.ಡಿ.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದಿದ್ದಾರೆ.
ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ, ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದಾಗಿ ತಿಳಿಸಿದ್ದಾರೆ. ಹಾಗೂ ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಇದೆ, ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಇದೇ ರೀತಿ ಇತರೆ ಜಿಲ್ಲೆಗಳಲ್ಲೂ ಸಾಕಷ್ಟು ಹಣ ಲಭ್ಯವಿದೆ, ಮನೆ ಕಳೆದುಕೊಂಡಿರುವ ಬೆಳಗಾವಿಯ 44156 ಫಲಾನುಭವಿಗಳಿಗೆ 488 ಕೋಟಿ ಪರಿಹಾರ ಬಿಡುಗಡೆಯಾಗಿದೆ. ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.