ನವದೆಹಲಿ: ತಮಿಳುನಾಡು ಸರ್ಕಾರ ಕೈಗೆತ್ತಿಕೊಂಡಿರುವ ಕಾವೇರಿ-ವೈಗೈ-ಗುಂಡಾರ್ ನದಿ ಜೋಡಣೆ ಯೋಜನೆಗೆ ತಕ್ಷಣವೇ ತಡೆಯಾಜ್ಞೆ ನೀಡುವಂತೆ ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ರಾಜ್ಯದ ಜಲಹಕ್ಕುಗಳಿಗೆ ಧಕ್ಕೆಯಾಗುವ ಆತಂಕ ವ್ಯಕ್ತಪಡಿಸಿರುವ ಕರ್ನಾಟಕ, ನವೆಂಬರ್ 19ರಂದು ಸುಪ್ರೀಂ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ.
ಕೇಂದ್ರ ಸರ್ಕಾರದ ತಾತ್ವಿಕ ಅನುಮೋದನೆ ಇಲ್ಲದಿದ್ದರೂ ತಮಿಳುನಾಡು ಸರ್ಕಾರ ಏಕಪಕ್ಷೀಯವಾಗಿ ಯೋಜನೆಯ ಕಾಮಗಾರಿಗಳನ್ನು ನಡೆಸುತ್ತಿದೆ ಎಂದು ಕರ್ನಾಟಕ ತನ್ನ ಅರ್ಜಿಯಲ್ಲಿ ಗಂಭೀರ ಆರೋಪ ಮಾಡಿದೆ. ಈಗಾಗಲೇ ಮೊದಲ ಹಂತದ ಹಲವು ಕಾಮಗಾರಿಗಳು ಪೂರ್ಣಗೊಂಡಿದ್ದು, ಮುಂದಿನ ಹಂತದ ಕಾಮಗಾರಿಗಳಿಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನೂ ನಡೆಸಲಾಗಿದೆ ಎಂಬ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ.
ರಾಜ್ಯದ ಮನವಿ ಏನು?
ಕಾವೇರಿ ಹೆಚ್ಚುವರಿ ನೀರನ್ನು ತಮಿಳುನಾಡು ಏಕಪಕ್ಷೀಯವಾಗಿ ಬಳಸಿಕೊಳ್ಳಲು ಮುಂದಾಗಿದ್ದು, ಇದರಿಂದ ಕರ್ನಾಟಕದ ಹಿತಾಸಕ್ತಿಗೆ ತೀವ್ರ ಧಕ್ಕೆಯಾಗಲಿದೆ. ಆದ್ದರಿಂದ ಯೋಜನೆಯ ಮೊದಲ, ಎರಡನೇ ಮತ್ತು ಮೂರನೇ ಹಂತದ ಎಲ್ಲಾ ಕಾಮಗಾರಿಗಳನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಆದೇಶಿಸಬೇಕು.
ನಿಯಮಬಾಹಿರವಾಗಿ ಈಗಾಗಲೇ ಪೂರ್ಣಗೊಳಿಸಲಾಗಿರುವ ಮೊದಲ ಹಂತದ ಕಾಮಗಾರಿಗಳನ್ನು ತೆರವುಗೊಳಿಸುವಂತೆಯೂ ತಮಿಳುನಾಡಿಗೆ ನಿರ್ದೇಶನ ನೀಡಬೇಕು. ಈ ಯೋಜನೆಗೆ ‘ರಾಷ್ಟ್ರೀಯ ಯೋಜನೆ’ಯ ಮಾನ್ಯತೆ ನೀಡುವ ಪ್ರಕ್ರಿಯೆಯನ್ನು ಮುಂದುವರಿಸದಂತೆ ಕೇಂದ್ರ ಸರ್ಕಾರಕ್ಕೂ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ಮನವಿ ಮಾಡಿದೆ.
ರಾಜ್ಯ ಸರ್ಕಾರ ಸಲ್ಲಿಸಿರುವ ಈ ಮಹತ್ವದ ಮಧ್ಯಂತರ ಅರ್ಜಿಯು ಬರುವ ಡಿಸೆಂಬರ್ 10ರಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.
Laxmi News 24×7