Breaking News

ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್; ಆರೋಪಿಯಲ್ಲ ಈಗ ಸಾಕ್ಷಿ!

Spread the love

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಬಹುಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ) ಅಧಿಕಾರಿಗಳು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಹಗರಣದ ಆರೋಪ ಹೊತ್ತಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸವರಾಜ್ ದದ್ದಲ್ ಅವರನ್ನು ಈ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಅವರನ್ನು ಪ್ರಮುಖ ‘ಸಾಕ್ಷಿ’ಗಳನ್ನಾಗಿ ಪರಿಗಣಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಪರುಶರಾಮ್, ನೆಕ್ಕುಂಟಿ ನಾಗರಾಜ್ ಮತ್ತು ಸತ್ಯನಾರಾಯಣ ವರ್ಮ ಈ ಹಗರಣದ ಪ್ರಮುಖ ಆರೋಪಿಗಳಾಗಿದ್ದಾರೆ. ನಿಗಮದ ಹಣವನ್ನು ಮಾಜಿ ಸಚಿವ ಬಿ. ನಾಗೇಂದ್ರ ಅವರು ಎಲ್ಲೂ ವೈಯಕ್ತಿಕವಾಗಿ ದುರುಪಯೋಗಪಡಿಸಿಕೊಂಡಿಲ್ಲ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ.

ಪ್ರಮುಖ ಆರೋಪಿ ನೆಕ್ಕುಂಟಿ ನಾಗರಾಜ್, ನಿಗಮದ ಎಂಡಿ ಪರುಶರಾಮ್ ಅವರೊಂದಿಗೆ ಸೇರಿ ರಹಸ್ಯ ಡೀಲ್ ಮಾಡಿಕೊಂಡಿದ್ದ. ನಿಗಮದ ಹಣವನ್ನು ಹೂಡಿಕೆ ಮಾಡಿದರೆ ದುಪ್ಪಟ್ಟು ಮಾಡಿಕೊಡುವುದಾಗಿ ಪುಸಲಾಯಿಸಿ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದ.

ಎಂಡಿ ಮತ್ತು ಆರೋಪಿಗಳ ನಡುವೆ ನಡೆದ ಈ ಅಕ್ರಮ ವ್ಯವಹಾರಗಳು ಹಾಗೂ ಹಣ ವರ್ಗಾವಣೆಯ ವಿಚಾರ ಅಂದಿನ ಸಚಿವರಾಗಿದ್ದ ನಾಗೇಂದ್ರ ಅವರ ಗಮನಕ್ಕೆ ಬಂದಿರಲಿಲ್ಲ ಎಂದು ಸಿಐಡಿ ತನ್ನ ಅಂತಿಮ ವರದಿಯಲ್ಲಿ ಉಲ್ಲೇಖಿಸಿದೆ.

ಈ ಪ್ರಕರಣದ ತೀವ್ರತೆ ಹೆಚ್ಚಾದ ಬೆನ್ನಲ್ಲೇ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಸಿಐಡಿ ಸಲ್ಲಿಸಿರುವ ಅಂತಿಮ ದೋಷಾರೋಪ ಪಟ್ಟಿಯು ನಾಗೇಂದ್ರ ಮತ್ತು ಬಸವರಾಜ್ ದದ್ದಲ್ ಅವರಿಗೆ ದೊಡ್ಡ ಮಟ್ಟದ ಕಾನೂನು ರಿಲೀಫ್ ನೀಡಿದಂತಾಗಿದೆ.

ನಾಗೇಂದ್ರ ಅವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಡಿಕೆ ಸಂಪುಟಕ್ಕೆ ಮರುಸೇರ್ಪಡೆಯಾದ 25 ದಿನಗಳಲ್ಲೇ ಅವರು ರಾಜೀನಾಮೆ ಸಲ್ಲಿಸಿದರು. ಇದಕ್ಕೂ ಮೊದಲು, ಜೂನ್ 2024 ರಲ್ಲಿ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಸಚಿವ ಸ್ಥಾನದಿಂದ ಕೆಳಗಿಳಿದಿದ್ದರು.

ಏನಿದು ಪ್ರಕರಣ?
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ (Chandrashekaran) ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂದಿಸಿದಂತೆ ಜಾರಿ ನಿರ್ದೇಶನಾಲಯ ಸಹ ತನಿಖೆ ನಡೆಸುತ್ತಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ನಾಗೇಂದ್ರ ನಿಗಮದ ಅಧ್ಯಕ್ಷರಾದ, ಶಾಸಕ ಬಸನಗೌಡ ದದ್ದಲ್‌ ಅವರು ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಿರುವ ಬಗ್ಗೆ ಆರೋಪ ಬಂದಿತ್ತು.


Spread the love

About Laxminews 24x7

Check Also

ತೋಟದಲ್ಲಿ AI ಚಿರತೆ ಸೃಷ್ಟಿಸಿ ಪುಂಡಾಟ – ಕಿಡಿಗೇಡಿಗಾಗಿ ಪೊಲೀಸರ ಹುಡುಕಾಟ

Spread the loveದಾವಣಗೆರೆ: ಕಿಡಿಗೇಡಿಯೊಬ್ಬ ತೋಟದಲ್ಲಿ ಚಿರತೆ ಓಡಾಡುವಂತೆ AI ಚಿತ್ರ ಸೃಷ್ಟಿಸಿ ಜನರಲ್ಲಿ ಆತಂಕ ಮೂಡಿಸಿದ ಘಟನೆ ಚನ್ನಗಿರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ