ಚಿಕ್ಕೋಡಿ/ಬೆಳಗಾವಿ: ಒಂದು ದಿನದ ನವಜಾತ ಗಂಡು ಮಗುವನ್ನು ದೇವಸ್ಥಾನದಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಹೊರವಲಯದ ಬಸವೇಶ್ವರ ದೇವಸ್ಥಾನದಲ್ಲಿ ಹೆರಿಗೆಯ ನಂತರ ಗಂಡು ಮಗುವನ್ನು ಕೈಚೀಲದಲ್ಲಿ ಇಟ್ಟು ಪರಾರಿಯಾಗಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆಗೆ ಮಗು ಅಳುವಿನ ಧ್ವನಿ ಕೇಳಿದ ಸ್ಥಳೀಯರು ಮಗುವನ್ನು ರಕ್ಷಿಸಿ, ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಮಗುವಿಗೆ ಆರೈಕೆ ಮಾಡಿ ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಈಗ ಮಗು ಆರೋಗ್ಯವಾಗಿದೆ.
ಕೊರೊನ ವೈರಸ್ ಹಾವಳಿ ನಡುವೆಯೂ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮುಗಳಖೋಡ ಪಟ್ಟಣದ ವ್ಯಾಪ್ತಿಯಲ್ಲಿ ಯಾವುದೇ ಹೆರಿಗೆಯಾಗಿಲ್ಲ. ಬೇರೆ ಯಾವುದೋ ಊರಿನಲ್ಲಿ ಹೆರಿಗೆಯಾಗಿದ್ದು, ನಂತರ ಮಗುವನ್ನು ದೇವಸ್ಥಾನದಲ್ಲಿ ಬಿಟ್ಟು ಹೋಗಿರುವ ಸಾಧ್ಯತೆಗಳಿವೆ. ಈ ಕುರಿತು ಆರೋಗ್ಯ ಇಲಾಖೆಯ ಮೇಲಾಧಿಕಾರಿಗಳಿಗೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಆಶಾ ಕಾರ್ಯಕರ್ತೆಯರು ಹೇಳಿದ್ದಾರೆ.
ಈ ಕುರಿತು ಹಾರುಗೇರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಗು ಬಿಟ್ಟು ಹೋದವರಿಗೆ ಬಲೆ ಬೀಸಿದ್ದಾರೆ.