ಗದಗ: ಮತದಾನದ ಹಕ್ಕಿನ ರಕ್ಷಣೆ ಹಾಗೂ ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ಖಂಡಿಸಿ ಗದಗದಲ್ಲಿ (Gadag) ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ನಗರದ ಗಾಂಧಿ ಸರ್ಕಲ್ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕರು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧವೂ ಘೋಷಣೆಗಳನ್ನು ಕೂಗಿದರು.
ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡಬೇಕು, ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ತಡೆಯಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು, ‘ವೋಟ್ ಚೋರಿ ನಿಲ್ಲಿಸಿ, ಪ್ರಜಾಪ್ರಭುತ್ವ ಉಳಿಸಿ’ ಎಂದು ಘೋಷಣೆ ಕೂಗಿದರು.
ಜಿಲ್ಲೆಯ ಕಾಂಗ್ರೆಸ್ ಮುಂಚೂಣಿ ನಾಯಕರು ಹಾಗೂ ಇಂಡಿಯಾ ಒಕ್ಕೂಟದ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮತದಾನದ ಹಕ್ಕನ್ನು ಉಳಿಸಿ, ದೇಶದ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Laxmi News 24×7