ನವದೆಹಲಿ: ನ.26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಆಹ್ವಾನಿಸಲಾಗಿದೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದ ಎಲ್ಲ ನಾಯಕರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲಾಗುವುದು. ಸಂವಿಧಾನವು ಎಲ್ಲರೂ ಒಗ್ಗಟ್ಟಿನಿಂದ ಬದುಕಲು ಮಾರ್ಗದರ್ಶನ ನೀಡುವ ಅಮೂಲ್ಯ ಗ್ರಂಥವಾಗಿದೆ ಎಂದಿದ್ದಾರೆ.
ಸಂವಿಧಾನ ದಿನಾಚರಣೆಯ ಮತ್ತೊಂದು ಕಾರ್ಯಕ್ರಮ ಆಯೋಜಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರು ಆಚರಣೆ ಮಾಡುತ್ತಾರೆ ಅಥವಾ ಬಿಡುತ್ತಾರೆ ಎಂಬುದು ನಮಗೆ ಮುಖ್ಯವಲ್ಲ. ಸರ್ಕಾರದ ಅಧಿಕೃತ ಕಾರ್ಯಕ್ರಮದ ಮೇಲಷ್ಟೇ ಗಮನ ಹರಿಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಡಿ.ಕೆ. ಶಿವಕುಮಾರ್ ಅವರ ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರ ಅವರ ಅನುಭವಕ್ಕೆ ಬಂದಿರುವುದಾಗಿದೆ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದೆ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಅಹಿಂದ ಸಮಾವೇಶದ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವೇ ಅಹಿಂದ ಆಶಯಗಳನ್ನು ಹೊಂದಿದೆ. ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿ, ಸಮಸಮಾಜ ನಿರ್ಮಿಸುವುದು ನಮ್ಮ ಉದ್ದೇಶ ಎಂದು ಹೇಳಿದ್ದಾರೆ.
ಇದೇ ವೇಳೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯ ವೆಚ್ಚದ ಕುರಿತು ಬಿಜೆಪಿ ವ್ಯಕ್ತಪಡಿಸಿರುವ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರ ಯಾರಿಗೂ ತ್ರಿಶೂಲ ಅಥವಾ ಶಸ್ತ್ರಾಸ್ತ್ರಗಳನ್ನು ಪೂರೈಸಿ ಜನರ ಭಾವನೆಗಳೊಂದಿಗೆ ಆಟವಾಡಿಲ್ಲ. ಕರಾವಳಿ ಭಾಗದಲ್ಲಿ ಅಭಿವೃದ್ಧಿ ಮತ್ತು ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದು ಹಾಗೂ ನೈಸರ್ಗಿಕ ಸೌಂದರ್ಯವನ್ನು ಬಳಸಿಕೊಂಡು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದಿದ್ದಾರೆ.
Laxmi News 24×7