ಕೊಪ್ಪಳ: ಹೆಮ್ಮಾರಿ ಕೊರೊನಾ ವೈರಸ್ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಸೋಂಕಿತ 50 ವರ್ಷದ ಮಹಿಳೆ ಇಂದು ಸಾವನ್ನಪ್ಪಿದ್ದಾರೆ.
ಮೃತ ಮಹಿಳೆ ರೋಗಿ-7105 ಆಗಿದ್ದು, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಜಿಂದಾಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮಗನಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಆತನ ತಂದೆ-ತಾಯಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೂ ಸೋಂಕು ತಗುಲಿರುವುದು ಜೂನ್ 15 ರಂದು ದೃಢಪಟ್ಟಿತ್ತು.
ಸೋಂಕಿತರನ್ನು ಕೋವಿಡ್-19 ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿದ್ದಾರೆ. ಇತ್ತ ಮಹಿಳೆಯ ಮಗ ಹಾಗೂ ಪತಿಗೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಸಂಜೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 204 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 7,734ಕ್ಕೆ ಏರಿಕೆಯಾಗಿದೆ. ಜೊತೆಗೆ 26 ವರ್ಷದ ಯುವಕ ಸೇರಿ 8 ಹೆಮ್ಮಾರಿಗೆ ಬಲಿಯಾಗಿದ್ದು, ರಾಜ್ಯದಲ್ಲಿ ಮೃತ ಸಂಖ್ಯೆ 102ಕ್ಕೆ ಏರಿಕೆ ಕಂಡಿದೆ ಎಂದು ತಿಳಿಸಿತ್ತು. ಸದ್ಯ ಕೊಪ್ಪಳದಲ್ಲಿ ಕೊರೊನಾಗೆ ಬಲಿಯಾಗಿದೆ.