ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಹಳೆಯ ಸೇತುವೆ ಬಿರುಕು ಬಿಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಸುಮಾರು 4 ದಶಕಗಳ ಹಿಂದೆ ನಿರ್ಮಾಣವಾಗಿರುವ ಈ ಸೇತುವೆ, ಹಲವು ದಿನಗಳಿಂದ ಶಿಥಿಲಾವಸ್ಥೆಯಲ್ಲಿದ್ದರೂ ಇದುವರೆಗೂ ಸಮರ್ಪಕವಾಗಿ ದುರಸ್ತಿಗೊಳಿಸದಿರುವುದಕ್ಕೆ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋನಿಗರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಚಳ್ಳಕೆರೆ ಪಟ್ಟಣದೊಂದಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆ ಇದಾಗಿದೆ. ಪ್ರತಿನಿತ್ಯ ಸಾವಿರಾರು ಜನರು, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ಇದೇ ಮಾರ್ಗವನ್ನ ಅವಲಂಬಿಸಿದ್ದಾರೆ.
ಸೇತುವೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿರುವುದರಿಂದ ಯಾವುದೇ ಕ್ಷಣದಲ್ಲಿ ಕುಸಿದು ಬೀಳುವ ಆತಂಕ ಎದುರಾಗಿದೆ. ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.
ಇದೀಗ ಸೇತುವೆ ಅಪಾಯದ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ಶೀಘ್ರವೇ ತಜ್ಞರಿಂದ ಪರಿಶೀಲನೆ ನಡೆಸಿ ಸೇತುವೆಯನ್ನ ದುರಸ್ತಿಗೊಳಿಸಬೇಕು. ಅಲ್ಲಿಯವರೆಗೆ ಸಾರ್ವಜನಿಕರ ಸುರಕ್ಷತೆಗಾಗಿ ಪರ್ಯಾಯ ಮಾರ್ಗ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸೇತುವೆಗೆ ಮತ್ತಷ್ಟು ಹಾನಿಯಾಗುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಇಲ್ಲವಾದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂಬ ಆತಂಕ ಸ್ಥಳೀಯರಲ್ಲಿ ಮೂಡಿದೆ.
Laxmi News 24×7