ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಗುರುವಾರ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳ ಸಭೆ ನಡೆಸಿದರು. ಚುನಾವಣೆ ನೀತಿ ಸಂಹಿತೆ, ಬದಲಾದ ನಿಯಮಗಳು, ಶಾಂತಿ ಸುವ್ಯವಸ್ಥಿತ ಚುನಾವಣೆಗೆ ಸಹಕಾರ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ನೀಡಿ, ಅಭಿಪ್ರಾಯ ಪಡೆದುಕೊಂಡರು.
ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಪ್ರತಿನಿಧಿಗಳ ಸಭೆ ನಡೆಯಿತು.
ಈ ವೇಳೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಾತನಾಡಿ, ಈ ಬಾರಿ ಕೋವಿಡ್ ಭೀತಿಯ ನಡುವೆ ಚುನಾವಣೆ ನಡೆಯುತ್ತಿದೆ. ಹಾಗಾಗಿ ಎಲ್ಲರೂ ಮುಂಜಾಗ್ರತೆಯಿಂದ ಚುನಾವಣೆ ಎದುರಿಸಬೇಕಿದೆ. ಶಾಂತಿ, ಸುವ್ಯವಸ್ಥಿತ ಚುನಾವಣೆಗೆ ಎಲ್ಲರೂ ಸಹಕರಿಸಬೇಕು. ನಾಮಪತ್ರ ಸಲ್ಲಿಸುವ ಅಭ್ಯರ್ಥಿಯ ಜೊತೆಗೆ ಈ ಬಾರಿ ಇಬ್ಬರಿಗೆ ಮಾತ್ರ ಪ್ರವೇಶಾವಕಾಶವಿದೆ ಎಂದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಲೋಕಸಭೆ ಉಪಚುನಾವಣೆಯನ್ನು ಶಾಂತಿ, ಸುವ್ಯವಸ್ಥಿತವಾಗಿ ನಡೆಸಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾಧಿಕಾರಿ ತಿಳಿವಳಿಕೆ ನೀಡಿದ್ದಾರೆ. ಎಲ್ಲ ರಾಜಕೀಯ ಪಕ್ಷಗಳ ಕಾರ್ಯಕರ್ತರಿಗೂ ಇದನ್ನು ಮನವರಿಕೆ ಮಾಡಲಾಗುವುದು. 116 ಮತದಾನ ಕೇಂದ್ರಗಳಲ್ಲಿ ಮತದಾರರ ದಟ್ಟಣೆ ಕಡಿಮೆಗೊಳಿಸಲು ಕ್ರಮ ವಹಿಸಲಾಗುವ ಬಗ್ಗೆ ಮಾಹಿತಿ ನೀಡಿದರು ಎಂದು ತಿಳಿಸಿದರು.
ಈ ವೇಳೆ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ಶಾಂತಿ, ಸುವ್ಯವಸ್ಥಿತ, ಸುರಕ್ಷಿತ ಚುನಾವಣೆಗಾಗಿ ನಿಯಮಗಳಲ್ಲಿ ಬದಲಾವಣೆ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು. 1500 ಮತದಾರರಿರುವ ಮತಗಟ್ಟೆಗಳನ್ನು ವಿಭಜಿಸಿ 1000 ಮತದಾರರ ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಮತಗಟ್ಟೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಕೋವಿಡ್ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿದೆ. ಇನ್ನು ನಾಮಪತ್ರ ಸಲ್ಲಿಸಲು ಅಭ್ಯರ್ಥಿಯ ಜೊತೆಗೆ ಇಬ್ಬರಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್, ರಾಷ್ಟ್ರವಾದಿ ಕಾಂಗ್ರೆಸ್ ಮುಖಂಡರು, ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.