ಬೆಂಗಳೂರು: ಕಲಬುರಗಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರೆಡ್ ಝೋನ್‍ನಲ್ಲಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯನ್ನೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಇವರ ಜಾಗಕ್ಕೆ ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಲಾಗಿದೆ. ಬಿ.ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೆಂಗಳೂರಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 44 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇದರಲ್ಲಿ 30ಕ್ಕೂ ಹೆಚ್ಚು ಜನರಿಗೆ ತಬ್ಲಿಘಿಗಳಿಂದಲೇ ಕೊರೊನಾ ಸೋಂಕು ಬಂದಿದೆ. ಇನ್ನುಳಿದ ಪ್ರಕರಣಗಳು ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕದಿಂದ ಪತ್ತೆಯಾಗಿವೆ. ಬಹುತೇಕ ಜನ ತಬ್ಲಿಘಿಗಳ ಸಂಪರ್ಕದಿಂದಲೇ ಕ್ವಾರಂಟೈನ್ ಆಗಿದ್ದಾರೆ. ಇಂದು ಒಟ್ಟು ಆರು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.