Breaking News

ಧನ್ವೀರ್-ವಿಜಯಲಕ್ಷ್ಮಿ ಜಟಾಪಟಿ ಕೇಸ್‌| ನಟನಿಗೆ ಬಿಗ್ ರಿಲೀಫ್

Spread the love

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಧನ್ವೀರ್ ನಡುವಿನ ವಾಗ್ವಾದ ಮತ್ತು ನಿಂದನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವೀರ್‌ಗೆ ಕರ್ನಾಟಕ ಹೈಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ. ಧನ್ವೀರ್ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ್ ರಮಾನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ ನಡೆಸಿತು.

ವಿಚಾರಣೆ ವೇಳೆ ಧನ್ವೀರ್ ಪರ ಹಿರಿಯ ವಕೀಲ ಫಣೀಂದ್ರ ವಾದ ಮಂಡಿಸಿ, ದೂರಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ನಿರ್ದಿಷ್ಟವಾಗಿ ಯಾವ ಮಹಿಳೆಗೆ ನಿಂದನೆ ಮಾಡಲಾಗಿದೆ ಎಂಬುದನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಅಲ್ಲದೆ, ಕೇವಲ ಅವಾಚ್ಯ ಶಬ್ದಗಳ ಬಳಕೆಯಿಂದ ಸಾರ್ವಜನಿಕ ಶಾಂತಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ಹೀಗಾಗಿ ಪ್ರಕರಣದ ತನಿಖೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸರ್ಕಾರದ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ ತಡೆಯಾಜ್ಞೆ ನೀಡದಂತೆ ವಾದಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ರಾಜಾಜಿನಗರ ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರ ಜೊತೆಗೆ, ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಸಹ ನ್ಯಾಯಾಲಯ ಮುಂದುವರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂದನೆ ಮಾಡಲಾಗಿದೆ ಎನ್ನಲಾದ ಆಡಿಯೋದ ಸಂಪೂರ್ಣ ವಿವರಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ.


Spread the love

About Laxminews 24x7

Check Also

ಬೆಲೆ ಏರಿಕೆ ಖಂಡಿಸಿ ಬಾಗಲಕೋಟೆಯಲ್ಲಿ ಕೆಆರ್‌ಎಸ್ ಕಾರ್ಯಕರ್ತರ ಪ್ರತಿಭಟನೆ

Spread the loveಬಾಗಲಕೋಟೆ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ