ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಮತದಾನ ನಡೆಯಲಿದೆ.
ಮತದಾನ ದಿನದಂದು ಮಹಾನಗರ ಪಾಲಿಕೆಯ ವ್ಯಾಪ್ತಿಯ ಸರ್ಕಾರಿ ಕಚೇರಿಗಳ ನೌಕರರಿಗೆ ಸಾರ್ವತ್ರಿಕ ರಜೆಯನ್ನು ಮತ್ತು ಖಾಸಗಿ ಹಾಗೂ ಇತರ ನೌಕರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಮಹಾನಗರ ವ್ಯಾಪ್ತಿಯ ಎಲ್ಲ ಸರ್ಕಾರಿ, ಅರೆ ಸರ್ಕಾರಿ ಇಲಾಖೆ, ಖಾಸಗಿ ಉದ್ಯೋಗದಾತರು ಈ ಕುರಿತು ಕ್ರಮವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಕುರಿತು ಪ್ರಕಟಣೆ ನೀಡಿರುವ ಅವರು, ಮಹಾನಗರ ಪಾಲಿಕೆ ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟಂಬರ್ 3 ರಂದು ಶುಕ್ರವಾರ ಮತದಾನ ನಡೆಯಲಿದ್ದು, ಚುನಾವಣೆ ನಡೆಯುವ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು.
ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಆಯಾ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಚುನಾವಣೆ ನಡೆಯುವ ವಾರ್ಡ್‍ಗಳ ವ್ಯಾಪ್ತಿಯ ಹೊರಗಡೆ ಕೆಲಸ ನಿರ್ವಹಿಸುತ್ತಿದ್ದು, ಆದರೆ ಚುನಾವಣೆ ನಡೆಯುತ್ತಿರುವ ವಾರ್ಡಿನ ವ್ಯಾಪ್ತಿಯಲ್ಲಿ ನೋಂದಾಯಿತ ಮತದಾರ ಆಗಿರುವವರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯವಾಗುವುದಿಲ್ಲ, ತುರ್ತುಸೇವೆ ಅಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಮತ್ತು ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು. ಈ ಆದೇಶವು ಸೆಕ್ಷನ್ 25, ನೆಗೋಷಿಯೆಬಲ್ ಇನ್ಸ್ಟ್ರುಮೆಂಟ್ ಆಯಕ್ಟ್ 1881 ರಡಿ ಬರುವ ಎಲ್ಲಾ ಸಂಸ್ಥೆಗಳಿಗೂ ಸಹ ಅನ್ವಯಿಸುತ್ತದೆ.
ಸಂಬಂಧಿಸಿದ ಎಲ್ಲ ಸಾರ್ವಜನಿಕ ಉದ್ದಿಮೆಗಳು, ಖಾಸಗಿ ಕಂಪನಿ, ವ್ಯವಹಾರಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳವರು ಈ ಅಧಿಸೂಚನೆಯನ್ನು ಪಾಲಿಸಿ, ಎಲ್ಲ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಸೆಪ್ಟೆಂಬರ್ 3 ರಂದು ವೇತನ ಸಹಿತ ರಜೆ ನೀಡಬೇಕೆಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.