ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿಯಾದ ಬೆನ್ನಲ್ಲೇ ಸಚಿವರ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, “ನಾನು ಯಾವ ಮಂತ್ರಿಗಳನ್ನೂ ಸುಮ್ಮನೆ ಬಿಡುವುದಿಲ್ಲ. ಎಲ್ಲರೂ 24/7 ರೀತಿ ಸಕ್ರಿಯವಾಗಿ ಕೆಲಸ ಮಾಡಬೇಕು” ಎಂದು ಖಡಕ್ ಆಗಿ ಹೇಳಿದ್ದಾರೆ. ಕೇವಲ ಬೆಂಗಳೂರಿಗೆ ಸೀಮಿತವಾಗದೆ, ಎಲ್ಲಾ ಸಚಿವರು ಮತ್ತು ಶಾಸಕರು ತಮ್ಮ ವ್ಯಾಪ್ತಿಯ ಪ್ರತಿ ಜಿಲ್ಲೆಯಲ್ಲೂ ಕಡ್ಡಾಯವಾಗಿ ಪ್ರವಾಸ ಮಾಡಿ, ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆದೇಶಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಎಸ್‌ಐಆರ್ ವಿಚಾರದಲ್ಲಿ ದೊಡ್ಡ ಸಮಸ್ಯೆಯಿದೆ, ಇದನ್ನು ಯಾರೂ ಹಗುರವಾಗಿ ಪರಿಗಣಿಸುವಂತಿಲ್ಲ ಎಂದು ಎಚ್ಚರಿಸಿರುವ ಸಿಎಂ, ಚುನಾವಣಾ ವ್ಯವಸ್ಥೆಯ ಈ ಪ್ರಮುಖ ಪ್ರಕ್ರಿಯೆಯ ಕಡೆಗೆ ನಾಯಕರು ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚಿಸಿದ್ದಾರೆ.
ಈ ಹಿಂದೆ ಎಸ್‌ಐಆರ್ ಮಹತ್ವದ ಸಭೆಗೆ ಗೈರುಹಾಜರಾಗಿದ್ದ ಕೆಪಿಸಿಸಿ ಪದಾಧಿಕಾರಿಗಳ ವಿರುದ್ಧ ಡಿ.ಕೆ. ಶಿವಕುಮಾರ್ ಅವರು ಕಠಿಣ ಶಿಸ್ತು ಕ್ರಮ ಜರುಗಿಸುವ ಮೂಲಕ ಬಿಸಿ ಮುಟ್ಟಿಸಿದ್ದರು.
ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಲಾ ಅವರು ಸಭೆಗೆ ಗೈರಾದ ನಾಯಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನೀಡಿದ ಸೂಚನೆಯ ಬೆನ್ನಲ್ಲೇ ಬೇಜವಾಬ್ದಾರಿತನ ಪ್ರದರ್ಶಿಸಿದ ಒಟ್ಟು ಮೂವರು ಕೆಪಿಸಿಸಿ ಉಪಾಧ್ಯಕ್ಷರು ಮತ್ತು 29 ಪ್ರಧಾನ ಕಾರ್ಯದರ್ಶಿಗಳನ್ನು ಹುದ್ದೆಯಿಂದ ಮುಕ್ತಗೊಳಿಸಲಾಗಿತ್ತು.
Laxmi News 24×7