ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನ್ ಅಧಿನಿಯಮ’ವನ್ನು ಜಾರಿಗೊಳಿಸಲು ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಬೆಂಬಲ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ದೇಶದ 80ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ದೊರೆಯಬೇಕಾದ ಅಗತ್ಯವನ್ನು ಒತ್ತಿ ಹೇಳಿದರು.
ಪಂಚಾಯಿತಿಗಳು, ನಗರಸಭೆಗಳು ಹಾಗೂ ಮಹಾನಗರ ಪಾಲಿಕೆಗಳಲ್ಲಿ ಮಹಿಳಾ ಜನಪ್ರತಿನಿಧಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸ್ಥಳೀಯ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
‘ನಾರಿ ಶಕ್ತಿ ವಂದನ್ ಅಧಿನಿಯಮ’ದ ಮೂಲಕ ಮಹಿಳೆಯರ ರಾಜಕೀಯ ಸಬಲೀಕರಣವನ್ನು ಸ್ಥಳೀಯ ಸಂಸ್ಥೆಗಳ ಮಟ್ಟದಿಂದ ದೇಶದ ಅತ್ಯುನ್ನತ ಚುನಾಯಿತ ಸಂಸ್ಥೆಗಳವರೆಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ. 2023ರಲ್ಲಿ ಸಂಸತ್ತು ಈ ಕಾನೂನನ್ನು ಅಂಗೀಕರಿಸಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಮೀಸಲಿಡುವ ಪ್ರಸ್ತಾವನೆ ಇದರಲ್ಲಿದೆ ಎಂದರು.
ಮಹಿಳಾ ಮೀಸಲಾತಿ ವಿಚಾರ ಹಲವು ದಶಕಗಳಿಂದ ರಾಜಕೀಯ ಭಿನ್ನಾಭಿಪ್ರಾಯಗಳಲ್ಲಿ ಸಿಲುಕಿಕೊಂಡಿದೆ ಎಂದು ಮೋದಿ ಹೇಳಿದರು. ಇದೀಗ ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಬದಿಗಿಟ್ಟು ಮಹಿಳೆಯರ ಸಾಮರ್ಥ್ಯವನ್ನು ಗೌರವಿಸುವ ಮೂಲಕ ಅವರಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಲು ಎಲ್ಲ ಪಕ್ಷಗಳು ಮುಂದಾಗಬೇಕು ಎಂದು ಕರೆ ನೀಡಿದರು.
ಮಹಿಳೆಯರು ನೀತಿ ರೂಪಿಸುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರೆ ದೇಶದ ಆಡಳಿತ ಮತ್ತು ಅಭಿವೃದ್ಧಿಗೆ ಹೊಸ ಆಯಾಮ ದೊರೆಯಲಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ರಾಜ್ಯ ವಿಧಾನಸಭೆಗಳು ಹಾಗೂ ಲೋಕಸಭೆಯಲ್ಲಿ ಮಹಿಳೆಯರಿಗೆ ಅವರ ನ್ಯಾಯಯುತ ಪಾಲು ದೊರೆಯುವಂತೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಅವರು ರಾಜಕೀಯ ಪಕ್ಷಗಳನ್ನು ಒತ್ತಾಯಿಸಿದರು.
Laxmi News 24×7