ಬೆಳಗಾವಿ: ಮಲಪ್ರಭಾ ಜಲಾಶಯದಲ್ಲಿ ಪ್ರಸ್ತುತ ಶೇ.49.5ರಷ್ಟು ನೀರು ಲಭ್ಯವಿದ್ದು, ಮುಂದಿನ ಜುಲೈ 2027ರವರೆಗೆ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಸಮರ್ಪಕ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ನೀರಿನ ಬೇಡಿಕೆಯನ್ನು ನಿಖರವಾಗಿ ಅಂದಾಜಿಸಿ, ಮಹಾರಾಷ್ಟ್ರದಿಂದ ಅಗತ್ಯ ಪ್ರಮಾಣದ ನೀರು ಪಡೆಯಲು ಸಿದ್ಧತೆ ಮಾಡಿಕೊಳ್ಳಬೇಕು. ಕುಡಿಯುವ ನೀರನ್ನು ಸಂರಕ್ಷಿಸುವ ಉದ್ದೇಶದಿಂದ ಅನಧಿಕೃತ ಪಂಪ್ಸೆಟ್ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಗ್ರಾಮ ಪಂಚಾಯತಿಗಳಲ್ಲಿರುವ ಟ್ಯಾಂಕರ್ಗಳ ಮೂಲಕ ನೀರು ಪೂರೈಸಬೇಕು. ಅಗತ್ಯವಿದ್ದಲ್ಲಿ ಹೆಚ್ಚುವರಿ ಟ್ಯಾಂಕರ್ಗಳ ವ್ಯವಸ್ಥೆಗಾಗಿ ಮುಂಚಿತವಾಗಿಯೇ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು ಎಂದರು.
ಇನ್ನು ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ಪರಿಸ್ಥಿತಿಗೆ ಅನುಗುಣವಾಗಿ ಮೇವು ಬ್ಯಾಂಕ್ಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಮೇವು ಪೂರೈಕೆಗೂ ಮುಂಚಿತವಾಗಿ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಎದುರಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Laxmi News 24×7