ಶಿವಮೊಗ್ಗ: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಸ್ವಾಧೀನದಲ್ಲಿರುವ ಒಟ್ಟು 4351 ಕೆರೆಗಳ ಪೈಕಿ ಇನ್ನೂ 539 ಕೆರೆಗಳ 2431 ಎಕರೆ ಭೂಮಿ ಒತ್ತುವರಿ ತೆರವಾಗಬೇಕಿದ್ದು, ಕೂಡಲೇ ಇದಕ್ಕೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದರು.
ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು
ಗ್ರಾಮ ಪಂಚಾಯತಿ ಆಸ್ತಿಗಳ ಸಂರಕ್ಷಣೆ ಇಲಾಖೆಯ ಅಧಿಕಾರಿಗಳ ಹೊಣೆಯಾಗಿದೆ. ಮೊದಲಿಗೆ ಪ್ರಭಾವಿಗಳು ಮಾಡಿರುವ ಕೆರೆ ಒತ್ತುವರಿ ತೆರವು ಮಾಡಿಸಿ ಎಂದು ಸೂಚಿಸಿದರು. ಎಲ್ ನಿನೋ ಪ್ರಭಾವದಿಂದ ಈ ಬಾರಿ ಮಲೆನಾಡಿನಲ್ಲೂ ಮಳೆಯ ಕೊರತೆಯಾಗಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಈ ಕಾಲಘಟ್ಟದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಕೆರೆಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.
ಕೆರೆಗಳು ಗ್ರಾಮಗಳ ಜೀವನಾಡಿ, ಜಲ ಮೂಲಗಳಿದ್ದರೆ ಜನ, ಜಾನುವಾರುಗಳಿಗೆ ನೀರು ಲಭಿಸುತ್ತದೆ. ಜೊತೆಗೆ ನೀರು ಭೂಮಿಗೆ ಹಿಂಗುವ ಕಾರಣ ಅಂತರ್ಜಲ ಮಟ್ಟ ಸುಧಾರಿಸುತ್ತದೆ. ಭವಿಷ್ಯದ ಪೀಳಿಗೆಯ ಹಿತದೃಷ್ಟಿಯಿಂದ ಕೆರೆಗಳ ಒತ್ತುವರಿ ತೆರವು ಮಾಡಿಸಿ. ಈವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಒತ್ತುವರಿಯಾಗಿದ್ದ ಒಟ್ಟು 1,017 ಕೆರೆಗಳ 4,588 ಎಕರೆ ಪೈಕಿ ಈವರೆಗೆ 478 ಕೆರೆಗಳ 2,156 ಎಕರೆ ಒತ್ತುವರಿ ತೆರವು ಮಾಡಿಸಲಾಗಿದೆ. ಇನ್ನೂ 539 ಕೆರೆಗಳ 2,431 ಎಕರೆ ಭೂಮಿ ತೆರವು ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈನ್ನೂ ಅಂತರ್ಜಲ ಮಟ್ಟ ಎಲ್ಲೆಡೆ ಕುಸಿಯುತ್ತಿದ್ದು, ಮೇಲ್ಮೈ ನೀರಿನಿಂದ ಗ್ರಾಮೀಣ ಪ್ರದೇಶಗಳಿಗೆ ನೀರು ಪೂರೈಕೆ ಮಾಡಲು ಬಹುಗ್ರಾಮ ಕುಡಿಯುವ ನೀರು ಯೋಜನೆ ಮತ್ತು ಏಕ ಗ್ರಾಮ ಕುಡಿಯುವ ನೀರು ಯೋಜನೆಗೆ 67 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದ ಅವರು, ಏಕಗ್ರಾಮ ಕುಡಿಯುವ ನೀರು ಯೋಜನೆಯ ಶೇ.80ರಷ್ಟು ಕಾಮಗಾರಿ ಮುಕ್ತಾಯವಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಶೇ.40ರಷ್ಟು ಕಾಮಗಾರಿ ಇನ್ನೂ ಆಗಬೇಕಾಗಿದೆ. ಈ ಎಲ್ಲ ಕಾಮಗಾರಿಯನ್ನೂ ಸಮರೋಪಾದಿಯಲ್ಲಿ ಮುಗಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು.
ಎಲ್ಲ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಸಲು ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು, ನೀರು ಲಭ್ಯವಿಲ್ಲದ ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್ ಬಾಡಿಗೆಗೆ ಪಡೆದು ಅಥವಾ ಪರ್ಯಾಯ ಜಲ ಮೂಲದಿಂದ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಸೂಚನೆ ನೀಡಿದರು.
ಸಭೆಯಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್, ಎಂಎಲ್ಸಿ ಬಲ್ಕೀಶ್ ಬಾನು, ಜಿ.ಪಂ ಸಿಇಓ ರಿಷಿ ಆನಂದ್ ಹಾಗೂ ಇತರರಿದ್ದರು.
Laxmi News 24×7