ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಬೇಕಾದ ಎರಡು ತಿಂಗಳ ಹಣ ಬಿಡುಗಡೆಯಾಗದಿರುವುದಕ್ಕೆ ಆರ್ಥಿಕ ಸಮಸ್ಯೆಯೇ ಕಾರಣ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದೆ.
2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣವನ್ನ ಇದುವರೆಗೆ ಬಿಡುಗಡೆ ಮಾಡಿಲ್ಲ. ಹಣಕಾಸಿನ ಕೊರತೆಯಿಂದಾಗಿ ಎರಡು ತಿಂಗಳ ಹಣ ವಿತರಣೆ ಸಾಧ್ಯವಾಗಿಲ್ಲ ಎಂದು ಸರ್ಕಾರದ ಪರವಾಗಿ ಸ್ತ್ರೀಶಕ್ತಿ ಯೋಜನಾಧಿಕಾರಿ ಸೋನಲ್ ಎಸ್. ಐಗಲ್ ಅವರು ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಅನುಕೂಲಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಕಲ್ಯಾಣ ಯೋಜನೆಯಾಗಿದೆ. ಆದರೆ, ಈ ಯೋಜನೆಯಡಿ ಫಲಾನುಭವಿಗಳಿಗೆ ಹಣ ಪಾವತಿಸುವುದನ್ನ ಕಾನೂನುಬದ್ಧ ನಿರೀಕ್ಷೆಯ ಹಕ್ಕು ಎಂದು ಪರಿಗಣಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಸರ್ಕಾರ ತನ್ನ ಪ್ರಮಾಣಪತ್ರದಲ್ಲಿ ವಾದಿಸಿದೆ.
ಅಲ್ಲದೇ, ಸರ್ಕಾರದಿಂದ ನೀಡಲಾಗುವ ಆರ್ಥಿಕ ನೆರವನ್ನ ಫಲಾನುಭವಿಯ ಕಾನೂನುಬದ್ಧ ಹಕ್ಕಾಗಿ ಅಥವಾ ಕಡ್ಡಾಯವಾಗಿ ದೊರೆಯಬೇಕಾದ ಸೌಲಭ್ಯವಾಗಿ ಪರಿಗಣಿಸಲಾಗದು ಎಂದು ತಿಳಿಸಿರುವ ಸರ್ಕಾರ, ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಜಾಗೊಳಿಸುವಂತೆ ಹೈಕೋರ್ಟ್ಗೆ ಮನವಿ ಮಾಡಿದೆ.
ಕಮಲಾನಗರದ ಆರ್. ಗಂಗಾ ಹಾಗೂ ನಂದಿನಿ ಲೇಔಟ್ನ ಜಿ.ಡಿ. ಪವಿತ್ರಾ ಅವರು ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆಗೆ ಒತ್ತಾಯಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ನ ವಿಭಾಗೀಯ ಪೀಠ ನಡೆಸಿದ್ದು, ಸರ್ಕಾರ ಸಲ್ಲಿಸಿರುವ ಆಕ್ಷೇಪಣೆಗಳಿಗೆ ಪ್ರತಿಕ್ರಿಯೆ ನೀಡಲು ಅರ್ಜಿದಾರರಿಗೆ ಎರಡು ವಾರಗಳ ಕಾಲಾವಕಾಶ ನೀಡಿದೆ.
Laxmi News 24×7