ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ‘ಕ್ಷೀರಭಾಗ್ಯ’ ಯೋಜನೆಯಡಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ನೀಡಲಾಗುವ ‘ಸಾಯಿ ಶ್ಯೂರ್’ ರಾಗಿ ಹೆಲ್ತ್ ಮಿಕ್ಸ್ ವಿತರಣೆಗಾಗಿ 865.66 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ
2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಜೂನ್-2025 ರಿಂದ ಡಿಸೆಂಬರ್-2025ರ ಅವಧಿಗೆ ಸಂಬಂಧಿಸಿದಂತೆ ಸರ್ಕಾರದ ಪಾಲಿನ ಶೇ. 25ರಷ್ಟು ಅನುದಾನವಾದ 865.66 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ.
ವಿತರಣೆಯ ವಿವರ: ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ವಾರದಲ್ಲಿ ಐದು ದಿನ 1 ರಿಂದ 10ನೇ ತರಗತಿಯ ಮಕ್ಕಳಿಗೆ ಬಿಸಿ ಹಾಲಿನೊಂದಿಗೆ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಮಿಶ್ರಣ ಮಾಡಿ ವಿತರಿಸಲಾಗುತ್ತದೆ.
ಒಟ್ಟು ವೆಚ್ಚ: ಈ ಯೋಜನೆಯ ಒಟ್ಟು ವೆಚ್ಚ 100 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಶೇ. 25ರಷ್ಟು ಮೊತ್ತವನ್ನು ರಾಜ್ಯ ಸರ್ಕಾರ ಭರಿಸುತ್ತಿದೆ. ಉಳಿದ ಮೊತ್ತವನ್ನು ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಭರಿಸಲಿದೆ.
ಗುಣಮಟ್ಟದ ದೃಢೀಕರಣ: ವಿತರಿಸಲಾಗುವ ರಾಗಿ ಹೆಲ್ತ್ ಮಿಕ್ಸ್ ಪುಡಿಯ ಗುಣಮಟ್ಟವನ್ನು ಕಾಲಕಾಲಕ್ಕೆ ಸರ್ಕಾರಿ ಅಥವಾ ಅಧಿಕೃತ ಸಂಸ್ಥೆಗಳಿಂದ ಪರೀಕ್ಷಿಸಿ ‘ಗುಣಮಟ್ಟ ದೃಢೀಕರಣ’ (Quality Certification) ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.
ಅನುಷ್ಠಾನ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ಈ ಯೋಜನೆಯ ಅನುಷ್ಠಾನದ ಉಸ್ತುವಾರಿ ವಹಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಯೋಜನೆಯ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ.
Laxmi News 24×7