ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿರುವ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮಾಡಿದ ಹಿನ್ನೆಲೆಯಲ್ಲಿ ರಕ್ತದ ಅವಶ್ಯಕತೆ ಇತ್ತು. ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲೆಯ ಗುಡಗೇರಿ ಪೊಲೀಸ್ ಠಾಣೆಯ ಪಿಎಸ್‍ಐ ನವೀನ ಜಕ್ಕಲಿಯವರು ಆಸ್ಪತ್ರೆಗೆ ಭೇಟಿ ನೀಡಿ ರಕ್ತದಾನ ಮಾಡುವ ಮೂಲಕ ರೋಗಿಯೊಬ್ಬರಿಗೆ ಜೀವದಾನ ಮಾಡಿದ್ದಾರೆ. ವಿಲಿಯಂ ವರ್ಗೀಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಲಾಕ್‍ಡೌನ್ ಸಂದರ್ಭದಲ್ಲಿ ರಕ್ತನಿಧಿಗಳಲ್ಲಿ ರಕ್ತದ ಅಭಾವ ಇರುವುದರಿಂದ ಕರ್ತವ್ಯನಿರತ ಪೊಲೀಸ್ ಅಧಿಕಾರಿ ನವೀನ ಜಕ್ಕಲಿಯವರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಕೊರೊನಾ ಹಿನ್ನೆಲೆ ವಾರಿಯರ್ಸ್‍ಗಳಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಹಗಲು ರಾತ್ರಿ ಎನ್ನದೆ ದುಡಿಯುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಪೊಲೀಸ್ ಅಧಿಕಾರಿ ಸಾರ್ವಜನಿಕ ಸೇವೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.