ಹುಬ್ಬಳ್ಳಿ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ಆರೋಪಿ ಗಿರೀಶ್ ಸಾವಂತ್ ಅಲಿಯಾಸ್ ವಿಶ್ವನನ್ನು ದೋಷಿ ಎಂದು ಹುಬ್ಬಳ್ಳಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘೋಷಿಸಿದೆ.
ಕೊಲೆ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302, ಅಕ್ರಮ ಪ್ರವೇಶಕ್ಕೆ ಸಂಬಂಧಿಸಿದ ಸೆಕ್ಷನ್ 451 ಹಾಗೂ ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದ ಸೆಕ್ಷನ್ 201ರ ಅಡಿಯಲ್ಲಿ ಆರೋಪಿ ದೋಷಿ ಎಂದು ನ್ಯಾಯಾಲಯ ಆದೇಶಿಸಿದೆ.
ಹುಬ್ಬಳ್ಳಿ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಶಿಕ್ಷೆಯ ಪ್ರಮಾಣದ ಕುರಿತು ವಾದ ಆಲಿಸಲು ನವೆಂಬರ್ 25ರಂದು ಮುಂದಿನ ವಿಚಾರಣೆ ನಿಗದಿಪಡಿಸಲಾಗಿದೆ.
ಏನಿದು ಪ್ರಕರಣ?
2024ರ ಮೇ 15ರಂದು ಹುಬ್ಬಳ್ಳಿಯ ವಿರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಬರ್ಬರ ಹತ್ಯೆಯಾಗಿತ್ತು. ಆರೋಪಿ ಗಿರೀಶ್ ಅಲಿಯಾಸ್ ವಿಶ್ವ, ಅಂಜಲಿ ಅವರ ಮನೆಗೆ ನುಗ್ಗಿ ಮನೆಯವರ ಎದುರೇ ಹತ್ಯೆಗೈದು ಪರಾರಿಯಾಗಿದ್ದ ಎಂಬ ಆರೋಪ ಪ್ರಕರಣದಲ್ಲಿತ್ತು.
ಬಳಿಕ ದಾವಣಗೆರೆಯಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆರೋಪಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದ. ಇದಕ್ಕೂ ಕೆಲವೇ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ನಡೆದಿದ್ದರಿಂದ ಅಂಜಲಿ ಕೊಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಅಂಜಲಿ ಕೊಲೆ ಪ್ರಕರಣದಲ್ಲಿ ಮುನ್ನೆಚ್ಚರಿಕೆ ವಹಿಸುವಲ್ಲಿ ಪೊಲೀಸ್ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಡಿಸಿಪಿ, ಎಸಿಪಿ, ಇನ್ಸ್‌ಪೆಕ್ಟರ್ ಹಾಗೂ ಎಎಸ್‌ಐ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದರು.
Laxmi News 24×7