Breaking News

ಹಿರಣ್ಯಕೇಶಿ ನದಿಗೆ ಒಳಹರಿವು ಹೆಚ್ಚಳ; ಧುಪದಾಳ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಜಿಲ್ಲೆಯಲ್ಲಿನ ಮಳೆಯ ಕೊರತೆ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಬೆಳಗ್ಗೆ ಘಟಪ್ರಭಾ ಸಮೀಪದ ಧುಪದಾಳ ಜಲಾಶಯಕ್ಕೆ ಭೇಟಿ ನೀಡಿ ಜಲಾಶಯದ ನೀರಿನ ಮಟ್ಟ, ಒಳಹರಿವು ಹಾಗೂ ನೀರು ನಿರ್ವಹಣೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಪರಿಶೀಲನೆ ಬಳಿಕ ಮಾತನಾಡಿದ ಸಚಿವರು, ಮುಂಗಾರು ವಿಳಂಬದಿಂದ ರೈತರು ಹಾಗೂ ಸಾರ್ವಜನಿಕರಲ್ಲಿ ಉಂಟಾಗಿದ್ದ ಆತಂಕ ಈಗ ದೂರವಾಗತೊಡಗಿದೆ. ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿರುವ ಪರಿಣಾಮ ಹಿರಣ್ಯಕೇಶಿ ಹಾಗೂ ಘಟಪ್ರಭಾ ನದಿಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಇದರ ಪರಿಣಾಮ ಧುಪದಾಳ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಪ್ರಸ್ತುತ ಸುಮಾರು 8 ಸಾವಿರ ಕ್ಯೂಸೆಕ್‌ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ ಎಂದು ತಿಳಿಸಿದರು.

ಜಲಾಶಯಕ್ಕೆ ಹರಿದುಬರುತ್ತಿರುವ ಹೆಚ್ಚುವರಿ ನೀರನ್ನು ಘಟಪ್ರಭಾ ನದಿಗೆ ಬಿಡುಗಡೆ ಮಾಡಲಾಗುತ್ತಿದ್ದು, ಇದರ ಪರಿಣಾಮ ಬೆಳಗಾವಿಯಿಂದ ಬಾಗಲಕೋಟೆವರೆಗೆ ನದಿಯ ಹರಿವು ಸುಧಾರಿಸಿದೆ. ಈಗಾಗಲೇ ಬಾಗಲಕೋಟೆ ಜಿಲ್ಲೆಗೆ ನೀರು ಹರಿಸಲಾಗಿದ್ದು, ಬಿಡುಗಡೆಯಾದ ನೀರು ತಲುಪಿದೆ ಎಂದು ಸಚಿವರು ಹೇಳಿದರು.

ರೈತರ ಹಿತದೃಷ್ಟಿಯಿಂದ ಭಾನುವಾರ ಬೆಳಿಗ್ಗೆಯಿಂದಲೇ ಘಟಪ್ರಭಾ ಎಡದಂಡೆ ಕಾಲುವೆಗೆ 1,000 ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದೆ. ಸಂಜೆ ವೇಳೆಗೆ ನೀರಿನ ಹರಿವನ್ನು 2,000 ಕ್ಯೂಸೆಕ್‌ಗೆ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರಿಂದ ಸುಮಾರು 2 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆತು, ರೈತರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೇಗಿರಲಿದೆ ಎಂಬುದು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಆದ್ದರಿಂದ ರೈತರು ಲಭ್ಯವಿರುವ ನೀರನ್ನು ಮಿತವಾಗಿ ಹಾಗೂ ಸಮರ್ಪಕವಾಗಿ ಬಳಸಿಕೊಂಡು ನೀರಿನ ಸದ್ಬಳಕೆಗೆ ಆದ್ಯತೆ ನೀಡಬೇಕು ಎಂದು ಸಚಿವರು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ನೀರಾವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಲಾಶಯದ ನೀರಿನ ಮಟ್ಟ ಹಾಗೂ ಒಳಹರಿವಿನ ಮೇಲೆ ನಿರಂತರ ನಿಗಾ ವಹಿಸಿ, ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದುಂಡಪ್ಪಾ ಜೋಕನಟ್ಟಿ, ನೀರಾವರಿ ಮಹಾಮಂಡಳದ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ರೆಹಮಾನ್ ಮೊಕಾಶಿ, ರವಿ ನಾವಿ, ರಾಜು ವಗ್ಗಣ್ಣವರ, ಶಿವು ಪಾಟೀಲ, ಮಹೇಶ ಚಿಕ್ಕೋಡಿ, ಬಸು ನಾಡಗೇರ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

SIR ಕರ್ತವ್ಯ ವೇಳೆ ಕುಸಿದು ಬಿದ್ದು ಬಿಎಲ್‌ಒ ಸಾವು

Spread the loveಶಿವಮೊಗ್ಗ: ಎಸ್‌ಐಆರ್‌  ಕಾರ್ಯಚರಣೆ ವೇಳೆ ಮತ್ತೋರ್ವ ಬಿಎಲ್‌ಒ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ