ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.
ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್’ಕೌಂಟರ್ ನಡೆಸಲು ಆರಂಭಿಸಿದ್ದು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿವೆ.
ನಿನ್ನೆ ಕೂಡ ಕುಲ್ಗಾಂ ಜಿಲ್ಲೆಯ ನಾಗ್ನಾಡ್-ಚಿಮ್ಮರ್ ಎಂಬ ಪ್ರದೇಶದಲ್ಲಿ ಎನ್ಕೌಂಟರ್ ನಡೆಸಿದ್ದ ಸೇನಾಪಡೆಗಳು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿತ್ತು.
ಗಡಿಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘನೆ: 3 ನಾಗರೀಕರು ಸಾವು
ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ. ಗುಲ್ಪುರ್ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ನಡೆಸಿದ್ದು, ಪಾಕಿಸ್ತಾನ ಸೇನಾಪಡೆಯ ಅಪ್ರಚೋದಿತ ಗುಂಡಿನ ದಾಳಿಗೆ ಮೂವರು ನಾಗೀರೀಕರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಪಾಕಿಸ್ತಾನ ಸೇನೆ ಗುಲ್ಪುರ್ ಸೆಕ್ಟರ್ ಬಳಿ ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಮೂವರು ನಾಗರೀಕರು ಸಾವನ್ನಪ್ಪಿದ್ದು, ಮತ್ತೋರ್ವ ನಾಗರೀಕ ಗಂಭೀರವಾಗಿ ಗಾಯಗೊಂಡಿದ್ದಾನೆಂದು ಪೂಂಚ್ ಜಿಲ್ಲೆಯ ಉಪ ಆಯುಕ್ತ ರಾಹುಲ್ ಯಾದವ್ ಹೇಳಿದ್ದಾರೆ.