ಬೆಳಗಾವಿ, ಫೆ.22-ಪ್ರತಿಷ್ಠೆಯ ಕಣವಾಗಿ ಜಾರಕಿ ಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾಂದಿ ಹಾಡಿದ್ದ ಬೆಳಗಾವಿ ಗ್ರಾಮೀಣ ಪಿಎಲ್‍ಡಿ ಬ್ಯಾಂಕ್‍ಗೆ ನಡೆದ ಚುನಾವಣೆ ನಂತರ ಘಟನೆಗಳು ಮಾಸುವ ಮುನ್ನವೇ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಗೆ ಎದುರಾಗಿರುವ ಚುನಾವಣೆ ಆಡಳಿತಾರೂಢ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ.
ಡಿಸಿಸಿ ಬ್ಯಾಂಕ್ ಗದ್ದುಗೆ ಏರಲು ಒಂದೇ ಪಕ್ಷದಲ್ಲಿ ನಾಯಕರ ತೀವ್ರ ಪೈಪೋಟಿ ಹೆಚ್ಚಾಗಿದೆ. ಮಾರ್ಚ್‍ನಲ್ಲಿ ನಡೆಯುತ್ತಿರುವ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಯುತ್ತಿದ್ದು, ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ ಸಚಿವ ಉಮೇಶ್ ಕತ್ತಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ನಡುವೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.
ಮೂರು ಗುಂಪುಗಳಾಗಿ ಅಧಿಕಾರಕ್ಕಾಗಿ ಮೂವರು ನಾಯಕರು ತಮ್ಮ ಪ್ರತಿಷ್ಠೆಯನ್ನು ಪಣಕ್ಕಿಟ್ಟು ಹಗ್ಗಜಗ್ಗಾಟ ನಡೆಸುತ್ತಿದ್ದಾರೆ. ಸದ್ಯ ಉಮೇಶ್ ಕತ್ತಿ ಸಹೋದರ ಮಾಜಿ ಸಂಸದ ರಮೇಶ್ ಕತ್ತಿ ಅಧ್ಯಕ್ಷರಾಗಿದ್ದು, ಅವರನ್ನೇ ಮುಂದುವರೆಸಲು ಉಮೇಶ್‍ಕತ್ತಿ ಹರಸಾಹಸಪಡುತ್ತಿದ್ದರೆ, ಮಹೇಶ್ ಕುಮಟಳ್ಳಿಯನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂದು ರಮೇಶ್ ಜಾರಕಿ ಹೊಳಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಒತ್ತಡ ತಂದಿದ್ದಾರೆ.
ಈ ನಡುವೆ ಡಿಸಿಸಿ ಬ್ಯಾಂಕ್ ಮೇಲೆ ಹಿಡಿತ ಸಾಧಿಸಲು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದಾರೆ. ಸರ್ಕಾರದ ಇಬ್ಬರು ನಾಮನಿರ್ದೇಶಿತ ಸದಸ್ಯರೂ ಸೇರಿ 16 ನಿರ್ದೇಶಕರಿರುವ ಡಿಸಿಸಿ ಬ್ಯಾಂಕ್‍ನಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ನಡೆಯಲಿದ್ದು, ಬಿಜೆಪಿಯ ಮೂವರು ಪ್ರತಿಷ್ಠಿತ ನಾಯಕರ ನಡುವೆ ಪೈಪೋಟಿ ಏರ್ಪಟ್ಟಿದೆ. ಯಾರ ಕೈ ಮೇಲಾಗಲಿದೆ ಎಂಬುದು ಕಾದು ನೋಡಬೇಕು.
ಕಳೆದ ಸಾಲಿನಲ್ಲಿ ನಡೆದ ಗ್ರಾಮೀಣ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿ ಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರ ನಡುವೆ ತೀವ್ರ ಪೈಪೋಟಿ ಏರ್ಪಟ್ಟು ಈ ಚುನಾವಣೆ ರಾಜ್ಯ ಹಾಗೂ ದೇಶಾದ್ಯಂತ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮಧ್ಯಪ್ರವೇಶಿಸಿದ್ದರಿಂದ ಜಾರಕಿ ಹೊಳಿ ಸಹೋದರರು ಅಸಮಾಧಾನಗೊಂಡಿದ್ದರು.
ಈ ಚುನಾವಣೆಯೇ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಿತು ಎಂದೇ ಹೇಳಲಾಗಿದೆ. ಈಗ ಇದೇ ರೀತಿ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಎದುರಾಗಿದ್ದು, ಆಡಳಿತಾರೂಢ ಬಿಜೆಪಿ ನಾಯಕರ ನಡುವೆ ಪೈಪೋಟಿ ತೀವ್ರಗೊಂಡಿದೆ.