ಬೆಳಗಾವಿ, ಫೆ.22-ಮಹದಾಯಿ ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಇದೇ 26ರಂದು ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ಕಣಕುಂಬಿಗೂ ಭೇಟಿ ನೀಡಲಿದ್ದೇನೆ.
ಗೋವಾ ಮುಖ್ಯಮಂತ್ರಿ ಬೇಕಾದರೆ ನ್ಯಾಯಾಲಯದ ಮೊರೆ ಹೋಗಲಿ. ಮಹದಾಯಿ ವಿಚಾರದಲ್ಲಿ ನಮ್ಮ ಪರ ನ್ಯಾಯ ಸಿಗುವ ವಿಶ್ವಾಸವಿದೆ. ನೀರಾವರಿ ಯೋಜನೆಯಲ್ಲಿ ಯಾವುದೇ ತಾರತಮ್ಯ ಒದಗಿಸುವುದಿಲ್ಲ. ಎಲ್ಲರಿಗೂ ನ್ಯಾಯ ಒದಗಿಸುತ್ತೇನೆ ಎಂದು ಹೇಳಿದರು. ಮಹೇಶ್ ಕುಮಟಳ್ಳಿ ಅವರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅವರ ತ್ಯಾಗದಿಂದಲೇ ಸರ್ಕಾರ ರಚನೆಯಾಗಿದೆ ಎಂದು ತಿಳಿಸಿದರು.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾನು, ಉಮೇಶ್‍ಕತ್ತಿ ಸೇರಿಯೇ ಚುನಾವಣೆ ಮಾಡುತ್ತೇವೆ ಎಂದು ಹೇಳಿದರು.
ನಾನು ಇಂತಹ ಖಾತೆಯೇ ಬೇಕು ಎಂದು ಬೇಡಿಕೆ ಇಟ್ಟಿರಲಿಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಕೃಷ್ಣಾ ನದಿ ನೀರು ಹಂಚಿಕೆ ವಿಷಯ ನ್ಯಾಯಾಲಯದಲ್ಲಿದೆ. ಇದರ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.